ಲೋಕಸಭಾ ಚುನಾವಣೆಯ ಬಳಿಕ ಬೆಂಗಳೂರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸುವ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುವಾಗ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಪೆನ್ ಡ್ರೈವ್ ಬಹಿರಂಗವಾದ ಬಳಿಕ ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲೂ ಬಿಜೆಪಿ ಮುಜುಗರದ ಪರಿಸ್ಥಿತಿ ಎದುರಿಸಿದ್ದು, ಅಂತಿಮವಾಗಿ ಪ್ರಧಾನಿ ನರೇಂದ್ರ ಮೋದಿಯವರೇ ಸಂದರ್ಶನ ಒಂದರಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದಿದ್ದರು.
ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಪದವೀಧರ ಮೂರು ಹಾಗೂ ಶಿಕ್ಷಕರ ಮೂರು ಕ್ಷೇತ್ರಗಳಿಂದ ವಿಧಾನ ಪರಿಷತ್ ಗೆ ಜೂನ್ 3 ರಂದು ನಡೆಯಲಿರುವ ಚುನಾವಣೆಗೂ ಮೈತ್ರಿ ಮುಂದುವರಿಸುತ್ತಾ ಎಂಬ ಕುತೂಹಲ ಮನೆ ಮಾಡಿದೆ.
ಈಶಾನ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ ,ನೈರುತ್ಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಆದರೆ ಮೈತ್ರಿ ಮುಂದುವರಿಸುವ ಕುರಿತು ಇಂದು ನಡೆಯಲಿರುವ ರಾಜ್ಯ ಬಿಜೆಪಿಯ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ. ಅಂತಿಮವಾಗಿ ಮೈತ್ರಿ ಕುರಿತಂತೆ ಹೈಕಮಾಂಡ್ ನಾಯಕರು ಯಾವ ಸೂಚನೆ ನೀಡುತ್ತಾರೋ ಅದನ್ನು ಪಾಲಿಸಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.