ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿತ್ತು. ಅಲ್ಲದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ದೇವೇಗೌಡರ ಅಳಿಯ ಡಾ. ಸಿ.ಎನ್. ಮಂಜುನಾಥ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿತ್ತು.
ಇದರ ಮಧ್ಯೆ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯುವ ಸಂದರ್ಭದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯ ಒಳಗೊಂಡ ಪೆನ್ ಡ್ರೈವ್ ಗಳು ಬಹಿರಂಗವಾಗಿದ್ದು, ಇದು ಬಿಜೆಪಿ ನಾಯಕರಿಗೆ ಇರಿಸುಮುರಿಸು ತಂದಿತ್ತು.
ಹೀಗಾಗಿ ಜೂನ್ 3 ರಂದು ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಈ ಮೈತ್ರಿ ಮುಂದುವರೆಯಲಿದ್ಯಾ ಎಂಬ ಪ್ರಶ್ನೆ ಮೂಡಿತ್ತು. ಇದಕ್ಕೆ ಈಗ ಉತ್ತರಿಸಿರುವ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ, ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜೊತೆ ಮೈತ್ರಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ 6 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲಿದ್ದು, ಬಿಜೆಪಿ 4 ಹಾಗೂ ಜೆಡಿಎಸ್ 2 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಜೆಡಿಎಸ್ ಜೊತೆಗಿನ ಮೈತ್ರಿಗೆ ಯಾವುದೇ ಭಂಗವಿಲ್ಲ ಎಂದು ತಿಳಿಸಿದ್ದಾರೆ.