ಬೆಂಗಳೂರು: ಪೆನ್ ಡ್ರೈವ್ ಹಂಚಿಕೆ ವಿಚಾರದಲ್ಲಿ ತಮ್ಮ ರಾಜೀನಾಮೆ ಕೇಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ನನ್ನ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳಲ್ಲಿ ಗೆದ್ದಿದೆ. ಅವರ ನಾಯಕತ್ವದಲ್ಲಿ ಎಷ್ಟು ಸ್ಥಾನ ಗೆದ್ದಿದೆ ಎಂದು ಪ್ರಶ್ನಿಸಿದ್ದಾರೆ.
ಹೀಗೆ ಹೇಳುವ ಮೂಲಕ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣಕ್ಕೆ ಟಾಂಗ್ ಕೊಟ್ಟಿದ್ದಾರೆ ಎನ್ನುವ ಚರ್ಚೆ ಆರಂಭವಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷದ ನಾಯಕರು ಸರ್ಕಾರದ ಸಾಧನೆ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಸರ್ಕಾರ ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ, ನಾಲ್ಕು ವರ್ಷಗಳಲ್ಲಿ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿರುವುದು ಮುಖ್ಯ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಬಣಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. 136 ಕ್ಷೇತ್ರಗಳನ್ನು ಗೆಲ್ಲಿಸಿದ್ದೇನೆ ಎಂದು ನೆನಪಿಸಿ ಮತ್ತೆ ತಮ್ಮ ನಾಯಕತ್ವದ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ತಾನೇ ನಾಯಕ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಬಣಕ್ಕೆ ಟಾಂಗ್ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.