ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಅಸ್ವಸ್ಥ ಪ್ರಕರಣ ಹೆಚ್ಚಳ ಹಿನ್ನಲೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.
ರಾಜ್ಯದ ವಿವಿಧೆಡೆ ಕಲುಷಿತ ನೀರು ಸೇವನೆಯಿಂದ ಜನರು ಅಸ್ವಸ್ಥಗೊಂಡಿರುವ ಪ್ರಕರಣಗಳು ಆತಂಕ ಉಂಟುಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ನಾಗರಿಕರಿಗೆ ಪೂರೈಸುವ ಕುಡಿಯುವ ನೀರು ಹಾಗೂ ಬೋರ್ ವೆಲ್ ನೀರನ್ನು ಒಳಗೊಂಡಂತೆ ಪ್ರಯೋಗಾಲಯದಲ್ಲಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ, ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸರಬರಾಜು ಮಾಡಲು ಹಾಗೂ ಕುಡಿಯುವ ನೀರಿನಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಬಿಬಿಎಂಪಿಯ ಮುಖ್ಯ ಆಯುಕ್ತರಿಗೆ, ಜಿಲ್ಲಾ ಪಂಚಾಯತ್’ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ರ ಬರೆದು ಸೂಚನೆ ನೀಡಿದ್ದಾರೆ.
ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದು, ಬೆಂಗಳೂರಿನ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮ ಆದ್ಯತೆ ಹಾಗೂ ಬದ್ಧತೆಯಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.