ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಒಂದು ಸಮುದಾಯದ ಓಲೈಕೆಗಾಗಿ ಇಡೀ ರಾಜ್ಯದ ಹಿತವನ್ನೇ ಕಡೆಗಣಿಸಲಾಗುತ್ತಿದೆ ಎಂದಿದ್ದಾರೆ.
ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆಯುತ್ತಿರುವುದು ಕಾಂಗ್ರೆಸ್ ಸರ್ಕಾರವಲ್ಲ ತಾಲಿಬಾನ್ ಗಿರಿ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಚನ್ನಗಿರಿಯಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನಲ್ಲಿ ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣದಲ್ಲಿ ಸರ್ಕಾರ ಒತ್ತಾಯಪೂರ್ವಕವಾಗಿ ಬಿ ರಿಪೋರ್ಟ್ ಸಲ್ಲಿಸಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಅಪರಾಧ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು. ಪಂಪ್ ವೆಲ್ ಪ್ರಕರಣದಲ್ಲಿಯೂ ಹಾಗೇ ಆಗಿದೆ. ರಸ್ತೆಯಲ್ಲಿ ನಮಾಜ್ ಮಾಡಿ ಸಮಾಜದ ಸ್ವಾಸ್ಥ್ಯ ಹಾಳುಮಾಡುತ್ತಿರುವವರನ್ನು ಬಂಧಿಸುವುದನ್ನು ಬಿಟ್ಟು ಪ್ರಕರಣ ಬೆಳಕಿಗೆ ತಂದ ಶರಣ್ ಪಂಪ್ ವೆಲ್ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.