ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ. ವಿಚಾರಣೆಗೆ ನಿನ್ನೆ ಕೋರ್ಟ್ ಗೆ ಯಡಿಯೂರಪ್ಪ ಹಾಜರಾಗದ ಹಿನ್ನೆಲೆಯಲ್ಲಿ ಅರೆಸ್ಟ್ ವಾರೆಂಟ್ ಜಾರಿಮಾಡುವಂತೆ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಬಂಧನವಾಗ್ತಾರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪ ಅವರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಅವರು ಒಂದು ನೋಟಿಸ್ ಗೆ ಉತ್ತರಿಸಬೇಕಾಗುತ್ತದೆ ಎಂದಿದ್ದಾರೆ.
ಪ್ರಕರಣ ಸಂಬಂಧ ಜೂನ್ 15ರೊಳಗೆ ಚಾರ್ಜ್ ಶೀಟ್ ಸಲ್ಲಿಸಬೇಕು. ಹೀಗಾಗಿ ಯಡಿಯೂರಪ್ಪ ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಅಗತ್ಯ ಬಿದ್ದರೆ ಸಿಐಡಿಯವರು ಯಡಿಯೂರಪ್ಪ ಅವರನ್ನು ಬಂಧಿಸುತ್ತಾರೆ. ಈ ಬಗ್ಗೆ ನಾನು ಏನೂ ಹೇಳಲಾಗದು ಎಂದರು.
ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಯಡಿಯೂರಪ್ಪ ತಮ್ಮ ವಿರುದ್ಧದ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್ ಗೆ ಉತ್ತರ ನೀಡಿರುವ ಯಡಿಯೂರಪ್ಪ ಜೂನ್ 17ರಂದು ವಿಚರಣೆಗೆ ಹಾಜರಾಗುವುದುದಾಗಿ ತಿಳಿಸಿದ್ದಾರೆ.