alex Certify ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಲು ಸಿಎಂ ಜತೆ ಚರ್ಚೆ: ಪರಮೇಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಲು ಸಿಎಂ ಜತೆ ಚರ್ಚೆ: ಪರಮೇಶ್ವರ್

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಯಾವುದೇ ಮುಲಾಜಿಲ್ಲದೇ, ಯಾವುದೇ ಒತ್ತಡಕ್ಕೆ ಒಳಗಾಗದೇ ತನಿಖೆ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ನಗರದ ತುರುವನೂರು ರಸ್ತೆಯ ಮೃತ ರೇಣುಕಸ್ವಾಮಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ, ತಂದೆ-ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರೇಣುಕಾಸ್ವಾಮಿ ಪ್ರಕರಣ ಎಲ್ಲರಿಗೂ ಬಹಳ ನೋವಿನ ಸಂಗತಿ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸುಮಾರು 17 ಮಂದಿಯನ್ನು ಬಂಧಿಸಲಾಗಿದೆ. ಅವರನ್ನು ತನಿಖೆಗೆ ಒಳಪಡಿಸಿ, ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.

ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು. ಜೀವನ ಸಾಗಿಸಲು ರೇಣುಕಾಸ್ವಾಮಿ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಬೇಕು ಎಂಬುವುದು ಮೃತ ರೇಣುಕಾಸ್ವಾಮಿ ಕುಟುಂಬದವರ ಬೇಡಿಕೆಯಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ತೀರ್ಮಾನಗೊಳ್ಳಲಾಗುವುದು ಎಂದು ತಿಳಿಸಿದರು.

ಯಾವುದೇ ರೀತಿಯಲ್ಲಿ ತಪ್ಪುಗಳು ಆಗದಂತೆ ಪ್ರಕರಣದ ತನಿಖೆಯಾಗಬೇಕು. ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯ ಕೊಡಿಸುವ ಕೆಲಸ ಮಾಡಲಾಗುತ್ತದೆ. ಯಾರು ಕೂಡ ಈ ಪ್ರಕರಣದಲ್ಲಿ ರಾಜಕೀಯ ಮಾಡುವುದು ಸಲ್ಲದು. ಎಲ್ಲವನ್ನೂ ರಾಜಕೀಯ ದೃಷ್ಠಿಯಿಂದ ನೋಡಬಾರದು. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಿಬಿಐ ತನಿಖೆ ಅಗತ್ಯವಿಲ್ಲ:

ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ಅಗತ್ಯವಿಲ್ಲ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಭಾಗಿಯಾಗಿರುವವರ ಕುರಿತು ಗಮನಹರಿಸಿ ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ. 24 ಗಂಟೆಯೊಳಗೆ ಎಲ್ಲರನ್ನೂ ಕೂಡ ಬಂಧನಕ್ಕೆ ಒಳಪಡಿಸಿ, ತನಿಖೆ ನಡೆಸಲಾಗುತ್ತಿದೆ. ಪೊಲೀಸ್ ಇಲಾಖೆಯು ಯಾವುದೇ ಒತ್ತಡಕ್ಕೆ ಒಳಗಾಗದೇ ಬಹಳ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.

ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ದಾವಣಗೆರೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದರ್ ಕುಮಾರ್ ಮೀನಾ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಹೆಚ್. ಆಂಜನೇಯ ಸೇರಿದಂತೆ ಮತ್ತಿತರರು ಇದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...