ವಿಜಯಪುರ: ವಿಜಯಪುರ ನಗರ ಹೊರವಲಯದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಜೀಪ್ ಗೆ ಟಿಪ್ಪರ್ ಡಿಕ್ಕಿ ಹೊಡೆಸಿ 6 ಸುತ್ತು ಗುಂಡು ಹಾರಿಸಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ವಿಜಯಪುರ ಸಮೀಪದ ಅಲಿಯಾಬಾದ್ ಗ್ರಾಮ ಪಂಚಾಯಿತಿ ಸದಸ್ಯ ಪಾಂಗರುದೊಡ್ಡಿ ನಿವಾಸಿ ರಾಜು ಖರೆ(48) ಕೊಲೆಯಾದವರು. ಅವರು ತಮ್ಮ ಥಾರ್ ಜೀಪ್ ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಟಿಪ್ಪರ್ ಮೂಲಕ ಡಿಕ್ಕಿ ಹೊಡೆಸಿದ್ದಾರೆ. ನಂತರ ಜಿಪಿನ ಮೇಲೆ 6 ಸುತ್ತು ಗುಂಡಿನ ದಾಳಿ ನಡೆಸಿದ್ದು, ಜೀಪ್ ನ ಡೋರ್ ಓಪನ್ ಆಗದೆ ಇದ್ದಾಗ ಕಲ್ಲು ಎತ್ತಿ ಹಾಕಿದ್ದಾರೆ. ಗಂಭೀರವಾಗಿ ಗಾಯಗೊಂಡು ರಾಜು ಖರೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಿಯಲ್ ಎಸ್ಟೇಟ್ ಉದ್ಯಮ ವ್ಯವಹಾರಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದಿರಬಹುದು ಎಂದು ಹೇಳಲಾಗಿದೆ.
ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಪೊಲೀಸ್ ಅಧಿಕಾರಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

