ಬೆಂಗಳೂರು: ನಗರದ ಹೃದಯಭಾಗವಾದ ಕೆ.ಆರ್. ಸರ್ಕಲ್‌ನಲ್ಲಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತ ಆತಂಕ ಸೃಷ್ಟಿಸಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ವಾಯುವಜ್ರ ಬಸ್‌ಗೆ ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬಿಎಂಟಿಸಿ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಡಿಕ್ಕಿಯ ತೀವ್ರತೆಗೆ ಚಾಲಕ ಬಸ್‌ನ ಕ್ಯಾಬಿನ್‌ನಲ್ಲೇ ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಮತ್ತು ಸಾರ್ವಜನಿಕರು ಸಾಕಷ್ಟು ಪ್ರಯತ್ನದ ಬಳಿಕ ಅವರನ್ನು ಹೊರತೆಗೆದು ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ವೇಳೆ ಎರಡೂ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಹಲವು ಮಂದಿ ಗಾಯಗೊಂಡಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಇನ್ನೂ ಕೆಲವರು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ.
ಘಟನೆಯ ವೇಳೆ ಬಿಎಂಟಿಸಿ ಬಸ್‌ನ ಬಾಗಿಲಿನಲ್ಲಿ ಮಹಿಳೆಯೊಬ್ಬರ ಕಾಲು ಸಿಲುಕಿಕೊಂಡ ಪರಿಣಾಮ ಅವರು ಕೆಲಕಾಲ ತೀವ್ರ ನೋವಿನಿಂದ ನರಳಾಡಿದರು. ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಸಿಬ್ಬಂದಿ ತಕ್ಷಣವೇ ನೆರವಿಗೆ ಧಾವಿಸಿ, ಸುರಕ್ಷಿತವಾಗಿ ಮಹಿಳೆಯನ್ನು ಹೊರತೆಗೆದರು.
ಇನ್ನೊಂದೆಡೆ, ಡಿಕ್ಕಿಯ ರಭಸಕ್ಕೆ ಬಸ್‌ನ ಹಿಂಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರು ಮುಂದಕ್ಕೆ ಎಸೆಯಲ್ಪಟ್ಟಿದ್ದು, ಇದರಿಂದ ಹಲವರಿಗೆ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಅಪಘಾತದ ಪರಿಣಾಮ ಕೆ.ಆರ್. ಸರ್ಕಲ್‌ನಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಮಾಹಿತಿ ತಿಳಿದ ತಕ್ಷಣ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಹಾನಿಗೊಳಗಾದ ಬಸ್‌ಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.
ಪ್ರಾಥಮಿಕ ತನಿಖೆಯಲ್ಲಿ ಅತಿವೇಗ ಮತ್ತು ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

