ಬೆಂಗಳೂರು: ಮಕ್ಕಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ಪಠ್ಯದಲ್ಲಿಯೇ ರಸ್ತೆ ಸುರಕ್ಷತೆ ಕುರಿತ ಪಾಠ ಅಳವಡಿಸುವ ಸಂಬಂಧ ಚರ್ಚೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಏರ್ಪಡಿಸಿದ್ದ ಭಾರತೀಯ ಆಟೋಮೊಬೈಲ್ ತಯಾರಕರ ಒಕ್ಕೂಟದ ವಾರ್ಷಿಕ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತದ ವಾಹನ ಉದ್ಯಮ ಜಾಗತಿಕ ಮಟ್ಟದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಜೆಡಿಪಿಗೆ ವಾಹನ ಉದ್ಯಮ ಶೇ. 6.5 ರಷ್ಟು ಕೊಡುಗೆ ನೀಡುತ್ತಿದ್ದು, ಮೂರು ಕೋಟಿಗೂ ಹೆಚ್ಚಿನ ಜನ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗ ಹೊಂದಿದ್ದಾರೆ ಎಂದರು.
ರಸ್ತೆ ಅಪಘಾತಗಳು ಸವಾಲಾಗುತ್ತಿದ್ದು, ನಿಯಂತ್ರಣಕ್ಕೆ ತಂತ್ರಜ್ಞಾನ ಬಳಕೆ, ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಅಪಘಾತಪೀಡಿತ ರಸ್ತೆಗಳನ್ನು ಗುರುತಿಸಿ, ಅಭಿವೃದ್ಧಿಪಡಿಸಲಾಗುತ್ತಿದೆ. ಸಂಚಾರ ನಿಯಮ ರಸ್ತೆ ಸುರಕ್ಷತಾ ನಿಯಮ ಉಲ್ಲಂಘಿಸುವವರು ವಿರುದ್ಧ ಕೃತಕ ಬುದ್ಧಿಮತ್ತೆ ಆಧಾರಿತ ಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಮಾರ್ಟ್ ವ್ಯವಸ್ಥೆ ಅಳವಡಿಸಿ ಅಪಘಾತ ಪ್ರಮಾಣ ಕಡಿಮೆ ಮಾಡಲಾಗಿದ್ದು, ರಾಜ್ಯದ ಇತರೆ ಪ್ರಮುಖ ರಸ್ತೆಗಳಲ್ಲಿಯೂ ಅದನ್ನು ಅಳವಡಿಸಿ ಪಾದಚಾರಿಗಳು, ಸೈಕಲ್ ಸವಾರರ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.

 
			 
		 
		 
		 
		 Loading ...
 Loading ... 
		 
		 
		