ಬೆಂಗಳೂರು: ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅಮಲಾ(49) ಮೃತ ದುರ್ದೈವಿ. ಆಡುಗೋಡಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪಘಾತದಲ್ಲಿ ಮಹಿಳೆ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಅವರ ಎರಡೂ ಕಾಲುಗಳ ಮೇಲೆ ಟಿಪ್ಪರ್ ಹರಿದ ಪರಿಣಾಮ ಅವರ ಎರಡೂ ಕಾಲುಗಳು ಛಿದ್ರಗೊಂಡಿದ್ದವು.
ಗಾಯಾಳುವನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಸ್ತೆ ಗುಂಡಿಯಿಂದಲೇ ಅನಾಹುತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದರೆ, ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಆಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ಟಿಪ್ಪರ್ ಚಾಲಕನ ವಿರುದ್ಧ ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

