ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ ಗಳ ದುರಸ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಕೊಪ್ಪಳ: ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳ ದುರಸ್ತಿಗೆ ನಮ್ಮ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಶನಿವಾರ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಹತ್ತಿರದ ಎಂ.ಎಸ್.ಪಿ.ಎಲ್ ಏರ್‌ಸ್ಟ್ರಿಪ್‌ಗೆ ಭೇಟಿ ನೀಡಿ, ಪೊಲೀಸ್ ಗೌರವ ಸ್ವೀಕರಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ವರ್ಷ ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಸಂಖ್ಯೆ 19ಕ್ಕೆ ಸ್ಟಾಪ್ ಲಾಗ್ ಎಲಿಮೆಂಟ್‌ ಅನ್ನು ಯಶಸ್ವಿಯಾಗಿ ಅಳವಡಿಸಲಾಯಿತು. ಇದಕ್ಕೆ ನಮ್ಮ ಸರ್ಕಾರವು ತ್ವರಿತವಾಗಿ ಸ್ಪಂದನೆ ನೀಡಿತ್ತು. ಪ್ರಸ್ತುತ ತುಂಗಭದ್ರಾ ಜಲಾಶಯವು ಹಳೆಯದಾಗಿದ್ದು, ಗೇಟ್‌ಗಳ ಸಮಸ್ಯೆಯೂ ಇದೆ. ಮಳೆ ಕಡಿಮೆಯಾದ ತಕ್ಷಣ ಜಲಾಶಯದ ಗೇಟ್‌ಗಳ ದುರಸ್ಥಿಯನ್ನು ಮಾಡಲಾಗುವುದು ಎಂದರು.

ನಮ್ಮ ಸರ್ಕಾರ ಜನಪರ ಸರ್ಕಾರವಾಗಿದ್ದು, ಜನರ ಅಭಿಪ್ರಾಯಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದೇವೆ. ಕೊಪ್ಪಳ ಜಿಲ್ಲೆಯಲ್ಲಿಯ ವಿವಿಧ ಅಭಿವೃದ್ಧಿ ಕೆಲಸ ಕಾರ್ಯಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗಳ ಕಾರ್ಯಕ್ರಮಗಳ ದಿನಾಂಕವನ್ನು ನಿಗದಿಪಡಿಸಿ, ಅವುಗಳ ಉದ್ಘಾಟನೆಯನ್ನು ನೆರವೇರಿಸಲಾಗುವುದು ಎಂದು ಉತ್ತರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ತುಂಗಭದ್ರಾ ಜಲಾಶಯ ಕುರಿತು ಚರ್ಚಿಸಲು ಆಂಧ್ರ ಮುಖ್ಯಮಂತ್ರಿಗಳಿಗೆ ಸಮಯ ಕೇಳಿದ್ದೇನೆ. ಸಮಯ ನಿಗದಿಯಾದ ನಂತರ ನವಲಿ ಸಮನಾಂತರ ಜಲಾಶಯ ಮತ್ತು ಇತರೆ ವಿಷಯಗಳನ್ನು ಪ್ರಸ್ತಾಪಿಸಲಾಗುವುದು. ಆದಷ್ಟು ಬೇಗನೆ ತುಂಗಭದ್ರಾ ಡ್ಯಾಂ ಗೇಟ್‌ಗಳ ದುರಸ್ತಿ ಕೆಲಸಗಳನ್ನು ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕೊಪ್ಪಳ ಸಂಸದ ಕೆ.ರಾಜಶೇಖರ ಹಿಟ್ನಾಳ್, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಹೆಚ್.ಆರ್ ಗವಿಯಪ್ಪ ಮೊದಲಾದವರು ಇದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read