ಬೆಂಗಳೂರು: ‘ಕಾಂತರಾ ಚಾಪ್ಟರ್ 1’ ಚಿತ್ರದ ಚಾಮುಂಡಿ ದೈವ ಪಾತ್ರವನ್ನು ಹೆಣ್ಣು ದೆವ್ವ ಎಂದು ಕರೆದು ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾದ ದೂರು ರದ್ದು ಮಾಡುವಂತೆ ಕೋರಿ ನಟ ರಣವೀರ್ ಸಿಂಗ್ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಕೊನೆಯ ಅವಕಾಶ ನೀಡಿದೆ.
ತಮ್ಮ ವಿರುದ್ಧ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ದಾಖಲಾಗಿರುವ ಖಾಸಗಿ ದೂರು ಹಾಗೂ ಹೈಗ್ರೌಂಡ್ಸ್ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಬಾಲಿವುಡ್ ನಟ ರಣವೀರ್ ಸಿಂಗ್ ಸಲ್ಲಿಸಿದ ಕ್ರಿಮಿನಲ್ ಅರ್ಜಿ ಸೋಮವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿದೆ.
ಪ್ರಕರಣದ ಖಾಸಗಿ ದೂರುದಾರ ಪ್ರಶಾಂತ್ ಮೆತಾಲ್ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಹೈಗ್ರೌಂಡ್ಸ್ ಪೊಲೀಸರ ಪರ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಇದೇ ಕೊನೆಯ ಅವಕಾಶವಾಗಿದೆ ಎಂದು ತಿಳಿಸಿ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿದೆ. ಅರ್ಜಿಯ ಮುಂದಿನ ವಿಚಾರಣೆಯವರೆಗೆ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಪೊಲೀಸರಿಗೆ ಸೂಚಿಸಿದ್ದು, ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶ ವಿಸ್ತರಿಸಲಾಗಿದೆ.

