ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿ ಕುರಿತ ಆದೇಶವನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಸೋಮವಾರ ಪ್ರಕಟಿಸಲಿದೆ.
ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಪುತ್ರಿ ರನ್ಯಾ ರಾವ್ ಅವರನ್ನು ಮಾರ್ಚ್ 3ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು. ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. 14.2 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ರನ್ಯಾ ಅವರ ಇಬ್ಬರು ಸಹಚರರನ್ನು ಬಂಧಿಸಲಾಗಿತ್ತು. ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ನಿಂದ ಜಾಮೀನು ಪಡೆಯಲು ರನ್ಯಾ ರಾವ್ ವಿಫಲ ಪ್ರಯತ್ನ ನಡೆಸಿದ್ದರು. ಡಿಆರ್ಐ ನಿಗದಿತ ಅವಧಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸದ ಕಾರಣ ರನ್ಯಾ ಅವರ ಪರ ವಕೀಲ ಕಿರಣ್ ಜವಳಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ನಾಳೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಲಿದೆ.