ಬೆಂಗಳೂರು : ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ್ರೆ ಶಿಕ್ಷಕರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗುವುದು ಎಂದು ಶಿಕ್ಷಣ ಇಲಾಖೆ ಖಡಕ್ ಆದೇಶ ಹೊರಡಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯ ಮೂಲಕ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ.
ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಿ, ಆಕ್ಷೇಪಿಸಿದೆ.
ಈ ಹಿನ್ನೆಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಅಂತವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಅಲ್ಲದೆ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು.ಉಲ್ಲೇಖಿತ ಪತ್ರದಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ಹಿಸುವ ಕುರಿತು ತಿಳಿಸಿರುವ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮತ್ತೊಮ್ಮೆ ಎಚ್ಚರಿಸಲಾಗಿದೆ ಎಂದು ಆದೇಶ ಹೊರಡಿಸಿದೆ.

