ಬೆಂಗಳೂರು: ರಾಜ್ಯದ ಎಲ್ಲಾ 5927 ಗ್ರಾಮ ಪಂಚಾಯಿತಿಗಳಿಗೆ ಆಗಸ್ಟ್ 15 ರೊಳಗೆ ಮಹಾತ್ಮ ಗಾಂಧೀಜಿ ಹೆಸರು ನಾಮಕರಣ ಮಾಡುವಂತೆ ಗಡುವು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಪಿಡಿಒ, ಕಾರ್ಯದರ್ಶಿ ಹಾಗೂ ಲೆಕ್ಕ ಸಹಾಯಕರ ವರ್ಗಾವಣೆ ಕೌನ್ಸೆಲಿಂಗ್ ಗೆ ಮಂಗಳವಾರ ಚಾಲನೆ ನೀಡಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಗ್ರಾಮಸ್ವರಾಜ್ ಪ್ರತಿಪಾದಕರಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹೆಸರನ್ನು ಚಿರಸ್ಥಾಯಿಗೊಳಿಸಲು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಅಂತೆಯೇ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧೀಜಿ ಹೆಸರು ನಾಮಕರಣ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮನರೇಗಾ ಬದಲಿಗೆ ಜಾರಿ ಮಾಡಲಾದ ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ಕೇಂದ್ರ ಸರ್ಕಾರ ತೆಗೆದುಹಾಕಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಪಂಚಾಯಿತಿಗಳಿಗೆ ಗಾಂಧೀಜಿ ಹೆಸರು ಇಡಲು ತೀರ್ಮಾನಿಸಿದೆ ಎಂದು ಸಚಿವ ಖಂಡ್ರೆ ತಿಳಿಸಿದ್ದಾರೆ.

