“ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಯಾವುದೇ ಲೋಪದೋಷಗಳಿಲ್ಲದೆ, ಅತ್ಯಂತ ಶಿಸ್ತುಬದ್ಧವಾಗಿ ನಡೆಸಲು ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಮಂಗಳವಾರ ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಸಚಿವರು ಪತ್ರಿಕಾಗೋಷ್ಠಿ ನಡೆಸಿದರು. ಸಚಿವರು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರೀಕ್ಷೆ ಭದ್ರತಾ ಕ್ರಮಗಳ ಕುರಿತು ಸುದೀರ್ಘವಾದ ಚರ್ಚೆಯನ್ನು ನಡೆಸಿದರು.
ನಂತರ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಡೆ ಮಾಡಿದರು. ಪರೀಕ್ಷಾ ಸಿದ್ಧತೆಗಳ ಕುರಿತು ಸಮಗ್ರವಾಗಿ ಮಾಹಿತಿಯನ್ನು ನೀಡಿದರು. “ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯಗೊಳಿಸಲಾಗಿದ್ದು, ಪರೀಕ್ಷಾ ಪ್ರಕ್ರಿಯೆಯನ್ನು ನೇರವಾಗಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಕಚೇರಿಗಳಿಂದ ಮೇಲ್ವಿಚಾರಣೆ ಮಾಡಲಾಗುತ್ತದೆ” ಎಂದು ಸಚಿವರು ವಿವರಿಸಿದರು.
“ಪ್ರಶ್ನೆಪತ್ರಿಕೆಗಳ ಸಾಗಾಟ ಮತ್ತು ಶೇಖರಣಾ ಕೇಂದ್ರಗಳಿಗೆ (Treasury) ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಇರಲಿದೆ” ಎಂದು ಹೇಳಿದರು.
“ಪರೀಕ್ಷಾ ಕೇಂದ್ರದ ಒಳಗೆ ಸಿಬ್ಬಂದಿ ಸೇರಿದಂತೆ ಯಾರಿಗೂ ಮೊಬೈಲ್ ಫೋನ್ ಕೊಂಡೊಯ್ಯಲು ಅವಕಾಶವಿಲ್ಲ. ಡಿಜಿಟಲ್ ಉಪಕರಣಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ” ಎಂದು ಮಧು ಬಂಗಾರಪ್ಪ ತಿಳಿಸಿದರು.
“ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಎದುರಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.
ಈ ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್, ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್, ಯೋಜನಾ ನಿರ್ದೇಶಕಿ ವಿದ್ಯಾಕುಮಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಭರತ್ ಎಸ್ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
ಸಚಿವರ ಪೋಸ್ಟ್: ಸಚಿವ ಮಧು ಬಂಗಾರಪ್ಪ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ರಾಜ್ಯದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ ಎಂದು ಹೇಳಿದ್ದಾರೆ.
2026ರ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದೆ. ಫೆಬ್ರವರಿ 28 ರಿಂದ ಪಿಯುಸಿ ಹಾಗೂ ಮಾರ್ಚ್ 18ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿವೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ನಮ್ಮ ಇಲಾಖೆ ಸರ್ವಸನ್ನದ್ಧವಾಗಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಗೆ ಸಿದ್ಧರಾಗಿ. ನಿಮ್ಮ ಉಜ್ವಲ ಭವಿಷ್ಯಕ್ಕೆ ನನ್ನ ಶುಭ ಹಾರೈಕೆಗಳು ಎಂದು ತಿಳಿಸಿದ್ದಾರೆ.

