ಕಾನ್ಪುರ: ಮತಾಂತರ ಮಾಡುವಂತೆ ತನಗೆ ಒತ್ತಡ ಹೇರಲಾಗುತ್ತಿದೆ ಎಂದು ವಿಡಿಯೋದಲ್ಲಿ ಗಂಭೀರ ಆರೋಪ ಮಾಡಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಪನಕಿ ಪೊಲೀಸ್ ಠಾಣಾ ವ್ಯಾಪ್ತಿಯ ರತನ್ಪುರದಲ್ಲಿ ಈ ದುರಂತ ಸಂಭವಿಸಿದೆ.
ಮೃತ ಯುವಕ ಆತ್ಮಹತ್ಯೆ ಮಾಡಿಕೊಳ್ಳುವ ಕೆಲವೇ ಕ್ಷಣಗಳ ಮೊದಲು ಸ್ವತಃ ಒಂದು ವಿಡಿಯೋವನ್ನು ಚಿತ್ರೀಕರಿಸಿದ್ದಾನೆ. ಈ ವಿಡಿಯೋದಲ್ಲಿ ತನಗೆ ಮತಾಂತರಗೊಳ್ಳುವಂತೆ ಕೆಲವು ವ್ಯಕ್ತಿಗಳು ನಿರಂತರವಾಗಿ ಮಾನಸಿಕ ಹಿಂಸೆ ಮತ್ತು ಒತ್ತಡ ನೀಡುತ್ತಿದ್ದಾರೆ ಎಂದು ಆತ ಹೇಳಿಕೊಂಡಿದ್ದಾನೆ. ಯುವಕನ ಸಾವಿನ ನಂತರ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಇದನ್ನು ತನಿಖೆಯ ಪ್ರಮುಖ ಪುರಾವೆಯಾಗಿ ಪರಿಗಣಿಸಿದ್ದಾರೆ.
ಲಕ್ನೋದ ಚಾರ್ಬಾಗ್ ರೈಲ್ವೆ ನಿಲ್ದಾಣದಲ್ಲಿ ನಾಲ್ವರು ವ್ಯಕ್ತಿಗಳು ಯುವಕನ ಮೇಲೆ ಹಲ್ಲೆ ನಡೆಸಿ, ಮತಾಂತರವಾಗುವಂತೆ ಬೆದರಿಕೆ ಹಾಕಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಈ ಬಗ್ಗೆ ಮೊದಲೇ ದೂರು ನೀಡಲು ಹೋದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಪೊಲೀಸರ ಈ ನಿರ್ಲಕ್ಷ್ಯವೇ ಯುವಕನ ಸಾವಿಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ತಡೆದು ಪ್ರತಿಭಟನೆ:
ಯುವಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸ್ಥಳೀಯ ನಿವಾಸಿಗಳು ಯುವಕನ ಶವವನ್ನು ರಸ್ತೆಯ ಮೇಲಿಟ್ಟು ಪ್ರತಿಭಟನೆ ನಡೆಸಿದರು. ಇದರಿಂದಾಗಿ ರತನ್ಪುರದಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.
ಪೊಲೀಸ್ ಕಮಿಷನರ್ ಹೇಳಿಕೆ
ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸ್ ಕಮಿಷನರ್ ರಘುವೀರ್ ಲಾಲ್ ಅವರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. “ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಯುವಕ ರೆಕಾರ್ಡ್ ಮಾಡಿರುವ ವಿಡಿಯೋವನ್ನು ಪರಿಶೀಲಿಸಲಾಗುತ್ತಿದೆ. ಅಲ್ಲದೆ, ಲಕ್ನೋ ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳನ್ನು ತನಿಖೆ ಮಾಡಲಾಗುವುದು. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಅವರು ಭರವಸೆ ನೀಡಿದ್ದಾರೆ. ಸದ್ಯ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಇಡೀ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವುದರಿಂದ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಸಲಹೆ: ಮತಾಂತರದಂತಹ ಸೂಕ್ಷ್ಮ ವಿಷಯಗಳು ಅಥವಾ ದೌರ್ಜನ್ಯದ ಸಂದರ್ಭದಲ್ಲಿ ಕಾನೂನು ನೆರವು ಪಡೆಯುವುದು ಮುಖ್ಯ
ಆತ್ಮಹತ್ಯೆ ತಡೆ ಸಹಾಯವಾಣಿ : ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

