ಬೆಂಗಳೂರು: ಕರ್ನಾಟಕದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಬ್ಯಾಂಕ್ ತರಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬಾಲ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಈ ಹಿಂದೆ ಗಂಡನ ಉದ್ಯಮದಲ್ಲಿ ಹೆಂಡತಿ ಕೈಜೋಡಿಸುತ್ತಿದ್ದಳು. ಆದರೆ, ಇತ್ತೀಚೆಗೆ ಮಹಿಳೆಯರೆ ಉದ್ಯಮಿಗಳಾಗುತ್ತಿದ್ದಾರೆ. ಇಂತಹ ಮಹಿಳೆಯರಿಗೆ ಸಹಾಯ ಮಾಡುವ ಉದ್ದೇಶದಿಂದಲೇ ಗೃಹಲಕ್ಷ್ಮಿ ಬ್ಯಾಂಕ್ ಆರಂಭಿಸಲಾಗುತ್ತಿದೆ. ಧರ್ಮಸ್ಥಳ ಸ್ವ ಸಹಾಯ ಸಂಘ ಕಳೆದ 20 ವರ್ಷಗಳಿಂದ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದೆ. ಅವರ ಸೇವೆ ಸದಾ ಸ್ಮರಣೀಯ. ಆದರೆ ಕೆಲವೊಂದು ಖಾಸಗಿ ಫೈನಾನ್ಸ್ ಕಂಪನಿಗಳಿಂದ ಜನರಿಗೆ ತೊಂದರೆಯಾಗುತ್ತಿದೆ. ಇದನ್ನು ತಡೆಗಟ್ಟಲು ಗೃಹಲಕ್ಷ್ಮಿ ಸಂಘ ಸಹಾಯವಾಗಲಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದರು.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಒಂದು ಸಾವಿರ ಗೌರವ ಧನ ಹೆಚ್ಚಿಸಲಾಗುವುದು. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಚುನಾವಣಾ ಕೆಲಸದಿಂದ ವಿಮುಕ್ತಿಗೊಳಿಸಲಾಗಿದೆ. ಜಾತಿ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತೆಯರು ಸಹಾಯ ಮಾಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
