ಬಳ್ಳಾರಿ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಬಳ್ಳಾರಿ (ಗ್ರಾಮಾಂತರ), ಸಂಡೂರು ಹಾಗೂ ಸಿರುಗುಪ್ಪ (ಕಂಪ್ಲಿ) ಯೋಜನೆಗಳ ವ್ಯಾಪ್ತಿಯಲ್ಲಿ ಈ ನೇಮಕಾತಿ ನಡೆಯಲಿದ್ದು, ಒಟ್ಟು 35 ಅಂಗನವಾಡಿ ಕಾರ್ಯಕರ್ತೆ ಹಾಗೂ 141 ಅಂಗನವಾಡಿ ಸಹಾಯಕಿ ಗೌರವ ಸೇವೆ ಹುದ್ದೆಗಳು ಖಾಲಿ ಇವೆ. ಆಯಾ ಗ್ರಾಮ ಅಥವಾ ವಾರ್ಡ್ನ ಸ್ಥಳೀಯ ಅರ್ಹ ಮಹಿಳೆಯರು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-10-2026 (ಸಂಜೆ 5:30ರ ಒಳಗೆ).
ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ, ಜಿಲ್ಲಾ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಮುಚ್ಚಿದ ಲಕೋಟೆಯಲ್ಲಿ ರಜಾದಿನಗಳನ್ನು ಹೊರತುಪಡಿಸಿ ಕಚೇರಿ ವೇಳೆಯಲ್ಲಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ನೇರವಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಬಳ್ಳಾರಿ: 9945254537, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಂಡೂರು: 8971982008, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಿರುಗುಪ್ಪ: 9449575444, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬಳ್ಳಾರಿ ಗ್ರಾಮೀಣ: 8971982008 ಗೆ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಾದ್ಯಂತ ದಿಢೀರ್ ಕಾರ್ಯಾಚರಣೆ: ಕಾನೂನು ಕ್ರಮಕ್ಕೆ ಎಚ್ಚರಿಕೆ
ಕಾರ್ಮಿಕ ಆಯುಕ್ತರು ಹಾಗೂ ಪೊಲೀಸ್ ಇಲಾಖೆಯ ನಿರ್ದೇಶನದ ಮೇರೆಗೆ, ಜಿಲ್ಲೆಯಾದ್ಯಂತ ಏಕಕಾಲಕ್ಕೆ ವಿವಿಧ ತಾಲೂಕುಗಳಲ್ಲಿ ದಿಢೀರ್ ತಪಾಸಣೆ ನಡೆಸಿ, ವಿವಿಧ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿದ್ದ ಒಟ್ಟು 20 ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಮತ್ತು ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರಚಿಸಲಾದ ಟಾಸ್ಕ್ ಫೋರ್ಸ್ ಸಮಿತಿ ತಂಡವು ಭಾನುವಾರ ಜಿಲ್ಲೆಯ ವಿವಿಧೆಡೆ ಆಕಸ್ಮಿಕ ದಾಳಿ ನಡೆಸಿತು.
ತಪಾಸಣೆಯ ವೇಳೆ ವಿವಿಧ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿದ್ದ ಮಕ್ಕಳನ್ನು ಗುರುತಿಸಿ ರಕ್ಷಿಸಲಾಯಿತು. ಬಳ್ಳಾರಿ- 14 ಮಕ್ಕಳು, ಕುರುಗೋಡು- 3 ಮಕ್ಕಳು, ಸಿರುಗುಪ್ಪ- 2 ಮಕ್ಕಳು, ಸಂಡೂರು- 1 ಮಗು ಸೇರಿ ಒಟ್ಟು 20 ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. ಈ ಎಲ್ಲಾ ಮಕ್ಕಳನ್ನು ತಾತ್ಕಾಲಿಕವಾಗಿ ಬಾಲಕರ ಬಾಲಮಂದಿರದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.
ರಕ್ಷಿಸಲ್ಪಟ್ಟ ಮಕ್ಕಳ ದಾಖಲಾತಿಗಳನ್ನು ಪರಿಶೀಲಿಸಿ, ಮಕ್ಕಳನ್ನು ದುಡಿಮೆಗೆ ನೇಮಿಸಿಕೊಂಡಿದ್ದ ಉದ್ದಿಮೆ ಮಾಲೀಕರ ವಿರುದ್ಧ ಕಾಯ್ದೆಯನ್ವಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಮೌನೇಶ್ ತಿಳಿಸಿದ್ದಾರೆ.
ಕಾರ್ಯಾಚರಣೆಯ ಸಂದರ್ಭದಲ್ಲಿ ಅಂಗಡಿ, ಹೋಟೆಲ್ ಹಾಗೂ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಮತ್ತು ಪೋಸ್ಟರ್ಗಳನ್ನು ವಿತರಿಸಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕುರಿತು ಅರಿವು ಮೂಡಿಸಲಾಯಿತು.
ಈ ಜಂಟಿ ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕರಾದ ರಮೇಶ್, ಪರಶುರಾಮ್, ತಿರುಮಲೇಶ್, ಮಂಜುನಾಥ್, ರೀಚ್ ಸ್ವಯಂ ಸೇವಾ ಸಂಸ್ಥೆಯ ಬಸಮ್ಮ, ಹನುಮಂತಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ತಿಕ್, ಅರುಳ್, ಮಕ್ಕಳ ಸಹಾಯವಾಣಿಯ ಜಿಲ್ಲಾ ಸಂಯೋಜಕ ಆನಂದ್, ಸಿಬ್ಬಂದಿಗಳಾದ ಚಂದ್ರಕಲಾ, ಸುಶೀಲ, ಪ್ಯಾರಾ ಲೀಗಲ್ ಸ್ವಯಂ ಸೇವಕಿ ಲಕ್ಷ್ಮಿ ಹಾಗೂ ಆಯಾ ಠಾಣೆಗಳ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

