ಬೀದರ್: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಹಾಗೂ ಪಾರದರ್ಶಕವಾಗಿರಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಅಕರಿಗಳಿಗೆ ಸೂಚನೆ ನೀಡಿದ್ದಾರೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲಬುರಗಿ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಗರಿಷ್ಟ ಮೂರು ತಿಂಗಳೊಳಗೆ ಅಂಗನವಾಡಿ ನೇಮಕಾತಿ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ನೇಮಕಾತಿ ವೇಳೆ ಸಮಸ್ಯೆಗಳು ಕಂಡು ಬಂದಲ್ಲಿ, ತಕ್ಷಣವೇ ಪರಿಹರಿಸಬೇಕು. ನಮ್ಮ ಇಲಾಖೆ ಜನರಿಗೆ, ಜನರ ಬದುಕಿಗೆ ಹತ್ತಿರವಾದ ಇಲಾಖೆ, ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ಮಾಡದೆ, ಕಾಳಜಿಯಿಂದ ಕೆಲಸ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.
ಹಲವೆಡೆ ಮಕ್ಕಳಿಗೆ ಸರಿಯಾಗಿ ಮೊಟ್ಟೆ ತಲುಪುತ್ತಿಲ್ಲ. ಹಾಲಿನ ಪೌಡರ್ ಮಾರಿಕೊಳ್ಳುತ್ತಾರೆ ಎನ್ನುವ ದೂರುಗಳು ಕೇಳಿ ಬರುತ್ತಿವೆ. ಅದು ನಿಜವಾಗಿದ್ದಲ್ಲಿ ಸಹಿಸಿಕೊಳ್ಳಲು ಸಾಧ್ಯವಿಲ್ಲ. ತಪ್ಪಿತಸ್ಥ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.