HomeKarnatakaತಮಿಳುನಾಡಿಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ: ಕೇಂದ್ರ ಸರ್ಕಾರದ್ದು ಇದೆಂಥ ನೀತಿ

ತಮಿಳುನಾಡಿಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ: ಕೇಂದ್ರ ಸರ್ಕಾರದ್ದು ಇದೆಂಥ ನೀತಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಘೋಷಣೆ ಮಾಡಲು ಅನುಮೋದನೆ ನೀಡಲಾಗಿದೆ.

ತಮಿಳುನಾಡು ರಾಜ್ಯದ ವಿಧಾನಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಇರುವಾಗ ರಾಜ್ಯದ ಅತ್ಯಂತ ಹಳೆಯ ವಿಮಾನ ನಿಲ್ದಾಣಗಳಲ್ಲಿ ಒಂದಾದ ಮಧುರೈ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಘೋಷಣೆ ಮಾಡಲು ಅನುಮೋದನೆಯನ್ನು ಕೇಂದ್ರ ಸರ್ಕಾರ ನೀಡಿದೆ.

ಈ ಕುರಿತು ಕರ್ನಾಟಕದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ‘ಕೇಂದ್ರದ ದ್ವಂದ್ವ ನೀತಿ: ತಮಿಳುನಾಡಿಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ!’ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರ ಪೋಸ್ಟ್ ವಿವರ: ಸಚಿವ ಎಂ.ಬಿ.ಪಾಟೀಲ್, ‘ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ‘ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಿರ್ಧಾರವು, ಕರ್ನಾಟಕದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ವಿಷಯದಲ್ಲಿ ತೋರುತ್ತಿರುವ ತಾರತಮ್ಯ ನೀತಿಗೆ ಸಾಕ್ಷಿಯಾಗಿದೆ. ನೆರೆಯ ರಾಜ್ಯಕ್ಕೆ ‘ಬೆಣ್ಣೆ’, ನಮಗೆ ‘ಸುಣ್ಣ’ ಎನ್ನುವ ಕೇಂದ್ರದ ಈ ಧೋರಣೆ ಸರ್ವಥಾ ಸರಿಯಲ್ಲ’ ಎಂದು ಹೇಳಿದ್ದಾರೆ.

‘ತಮಿಳುನಾಡು ಚುನಾವಣೆಯ ಮೇಲೆ ಕಣ್ಣಿಟ್ಟು ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರಬಹುದು. ಆದರೆ, ನಮ್ಮ ರಾಜ್ಯದ ಬೇಡಿಕೆಯ ಬಗ್ಗೆ ಕೇಂದ್ರವು ಪ್ರದರ್ಶಿಸುತ್ತಿರುವ ಉದಾಸೀನ ಮನೋಭಾವವು ಪ್ರಶ್ನಾರ್ಹವಾಗಿದೆ’ ಎಂದು ತಿಳಿಸಿದ್ದಾರೆ.

‘ಉತ್ತರ ಕರ್ನಾಟಕದ ಆರ್ಥಿಕ ಪ್ರಗತಿಯ ದೃಷ್ಟಿಯಿಂದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವಂತೆ ಕೋರಿ 24 ಜೂನ್ 2025 ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಶ್ರೀ ಕೆ. ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಇಷ್ಟಾಗಿಯೂ ರಾಜ್ಯದ ಬೇಡಿಕೆಯನ್ನು ನಿರ್ಲಕ್ಷಿಸಿರುವುದು ಖೇದಕರ’ ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ.

‘ಈಗಲಾದರೂ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಬೆಳಗಾವಿ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್ ಮತ್ತು ಹಾವೇರಿ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಒಗ್ಗಟ್ಟಾಗಿ ಧ್ವನಿ ಎತ್ತಿ, ರಾಜ್ಯದ ಹಿತಾಸಕ್ತಿಯ ಪರ ನಿಲ್ಲಬೇಕಿದೆ’ ಎಂದು ಸಲಹೆ ನೀಡಿದ್ದಾರೆ.

‘ಹುಬ್ಬಳ್ಳಿ ಅಥವಾ ಬೆಳಗಾವಿ ಎರಡರಲ್ಲಿ ಒಂದನ್ನಾದರೂ ತಕ್ಷಣವೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸಬೇಕು. ಎರಡನ್ನೂ ಉನ್ನತೀಕರಿಸಿದರೆ ಅದು ರಾಜ್ಯದ ಅಭಿವೃದ್ಧಿಗೆ ದೊಡ್ಡ ಬಲ ನೀಡಲಿದೆ. ಕೇಂದ್ರ ಸರ್ಕಾರವು ಕೂಡಲೇ ಕರ್ನಾಟಕದ ಅಗತ್ಯವನ್ನು ಮನಗಾಣಬೇಕು’ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular