ಬೆಂಗಳೂರು: ಬೆಂಗಳೂರಿನ ಬೇಗೂರು ಪ್ರದೇಶದ ಅಕ್ಷಯ ನಗರದಲ್ಲಿರುವ ಸ್ಕ್ರಾಪ್ ಗೋಡೌನ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ ಹಳೆಯ ಪ್ಲಾಸ್ಟಿಕ್ ವಸ್ತುಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಪ್ರದೇಶದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ನಡೆಸಿದ್ದಾರೆ. 4 ಅಗ್ನಿಶಾಮಕ ವಾಹನಗಳ 20ಕ್ಕೂ ಅಧಿಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಂದು ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ಗೊತ್ತಾಗಿಲ್ಲ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಬೇಗೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

