ಗದಗ: ಜಿಲ್ಲೆಯ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಬುದ್ಧಿಮಾಂದ್ಯ ಯುವತಿಯ ಮೇಲೆ ಚಾಕೊಲೇಟ್ ಆಮಿಷವೊಡ್ಡಿ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಯುವತಿ ಆರು ತಿಂಗಳ ಗರ್ಭಿಣಿಯಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾದ ಬಳಿಕ ಪ್ರಕರಣ ಬಹಿರಂಗವಾಗಿದೆ.
ಮಾಹಿತಿಯ ಪ್ರಕಾರ, ಆರೋಪಿ ದುರ್ಗಪ್ಪ ಎಂಬಾತ ಯುವತಿಯ ಮಾನಸಿಕ ಸ್ಥಿತಿಯ ದುರ್ಬಳಕೆ ಮಾಡಿಕೊಂಡು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಯುವತಿಯ ತಾಯಿ ರೋಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಜುಲೈ 6ರಂದು ಗದಗದ ಜಿಮ್ಸ್ ಆಸ್ಪತ್ರೆಗೆ ಯುವತಿಯನ್ನು ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಆಕೆ ಸುಮಾರು ಆರು ತಿಂಗಳ ಗರ್ಭಿಣಿ ಎಂಬುದು ವೈದ್ಯಕೀಯ ಪರೀಕ್ಷೆಯಲ್ಲಿ ಗೊತ್ತಾಗಿದ್ದು, ಬಳಿಕ ನಡೆದ ವಿಚಾರಣೆಯಲ್ಲಿ ಅತ್ಯಾಚಾರದ ಶಂಕೆ ವ್ಯಕ್ತವಾಗಿದೆ.
ಇನ್ನೂ ಆಘಾತಕಾರಿ ಸಂಗತಿಯೆಂದರೆ, ಆರೋಪಿ ಕೃತ್ಯದ ವೇಳೆ ವಿಡಿಯೋ ಚಿತ್ರೀಕರಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಈ ವಿಷಯವನ್ನು ಗ್ರಾಮದ ಕೆಲ ಯುವಕರು ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಅಲ್ಲದೆ, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರಬಹುದೆಂಬ ಶಂಕೆಯೂ ವ್ಯಕ್ತವಾಗಿದ್ದು, ಪೊಲೀಸರು ಈ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ. ವಿಡಿಯೋ ವೈರಲ್ ಆಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆಯೂ ಸೈಬರ್ ವಿಭಾಗದ ನೆರವಿನಿಂದ ಪರಿಶೀಲನೆ ನಡೆಸಲಾಗುತ್ತಿದೆ.

