ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿಯನ್ನು ಹತ್ಯೆಗೈದು, ಆಕೆಯ ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ನಡೆದಿದೆ.
ಮೃತಳನ್ನು ರೀಮಾ ಕುಮಾರಿ (20) ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ಧೀರಜ್ ಕುಮಾರ್ ತಲೆಮರೆಸಿಕೊಂಡಿದ್ದಾನೆ. ಮೂಲತಃ ಬಿಹಾರದವರಾದ ದಂಪತಿ, ಸುಮಾರು ಒಂದು ವರ್ಷದ ಹಿಂದೆ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದರು. ಗೇರುಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಇಬ್ಬರೂ ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು.
ಪ್ರಾಥಮಿಕ ಮಾಹಿತಿ ಪ್ರಕಾರ, ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಬಂದ ಬಳಿಕ ಪತಿ-ಪತ್ನಿಯ ನಡುವೆ ಜಗಳ ನಡೆದಿದ್ದು, ಇದೇ ವೇಳೆ ಧೀರಜ್ ಕುಮಾರ್ ಪತ್ನಿಯನ್ನು ಹತ್ಯೆಗೈದಿದ್ದಾನೆ ಎನ್ನಲಾಗಿದೆ. ಬಳಿಕ ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಮನೆ ಬಿಟ್ಟು ಪರಾರಿಯಾಗಿದ್ದಾನೆ.
ಇಂದು ಮನೆ ಸಮೀಪದಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಮೃತೆಯ ಸ್ನೇಹಿತೆ, ಈ ಬಗ್ಗೆ ಮನೆ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಮಾಲೀಕರು ಮನೆ ಬಾಗಿಲು ತೆರೆದು ಒಳ ಪ್ರವೇಶಿಸಿದಾಗ ಬೆಡ್‌ಶೀಟ್‌ನಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಕುಂಬಳಗೋಡು ಪೊಲೀಸರು ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪರಾರಿಯಾಗಿರುವ ಆರೋಪಿ ಧೀರಜ್ ಕುಮಾರ್‌ಗಾಗಿ ಶೋಧ ಕಾರ್ಯ ಆರಂಭಿಸಲಾಗಿದ್ದು, ಕೊಲೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

