ಆನೇಕಲ್: ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ನ ಹಿಂಬದಿ ಕುಳಿತಿದ್ದ 32 ವರ್ಷದ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಸಮೀಪದ ಅನಂತನಗರದಲ್ಲಿ ನಡೆದಿದೆ.
ಮೃತರನ್ನು ಕೇರಳ ಮೂಲದ ಮೇಧಾ (32) ಎಂದು ಗುರುತಿಸಲಾಗಿದೆ. ಅವರು ಎಲೆಕ್ಟ್ರಾನಿಕ್ ಸಿಟಿಯ ಭವಿಷ್ಯ ನಿಧಿ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು. ಮೇಧಾ ಅವರು ತಮ್ಮ ಸ್ನೇಹಿತ ಅಜಯ್ ಗುರು ಅವರೊಂದಿಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು.
ಈ ವೇಳೆ ಮುಂದೆ ಸಾಗುತ್ತಿದ್ದ ಕಾರಿನ ಚಾಲಕ ರಸ್ತೆ ಗುಂಡಿ ತಪ್ಪಿಸಲು ಏಕಾಏಕಿ ಬ್ರೇಕ್ ಹಾಕಿದ್ದಾನೆ ಎನ್ನಲಾಗಿದೆ. ಪರಿಣಾಮ, ಹಿಂದಿನಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೈಕ್ನ ಹಿಂಬದಿ ಕುಳಿತಿದ್ದ ಮೇಧಾ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಗೂಡ್ಸ್ ವಾಹನವೊಂದು ಅವರ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಬಳಿಕ ಸ್ಥಳೀಯರು ಆಕ್ರೋಶಗೊಂಡು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಹಾಗೂ ಸುತ್ತಮುತ್ತಲಿನ ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ರಸ್ತೆಗಳನ್ನು ಕೂಡಲೇ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

