ಬೀದರ್: ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದ ತಹಶೀಲ್ದಾರ್ ಕಚೇರಿಯ ಬಳಿ ಭಾರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಮನೆ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.
ಮಾಹೇರಾ ಮೃತಪಟ್ಟ ಬಾಲಕಿ. ಈ ವೇಳೆ ಮನೆಯಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭಾಗದಲ್ಲಿ ಬಿರುಗಾಳಿ ಆಲಿಕಲ್ಲು ಮಳೆಯಾಗಿದ್ದು, ಈ ವೇಳೆ ಮನೆಯ ಮೇಲ್ಚಾವಣಿ ಹಾರಿಹೋಗಿದೆ. ಮೇಲ್ಚಾವಣಿ ಮೇಲೆ ಇಟ್ಟಿದ್ದ ಕಲ್ಲುಗಳು ಬಾಲಕಿ ಮೇಲೆ ಬಿದ್ದು ಮೃತಪಟ್ಟಿದ್ದಾಳೆ.
ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ಹುಲಸೂರು ಪಟ್ಟಣದ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಶಿವಾನಂದ ಮೇತ್ರೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರಕ್ಕೆ ಕಳುಹಿಸಿದ್ದಾರೆ.

