ಚಿತ್ರದುರ್ಗ ಜಿಲ್ಲೆಯ ವಿವಿಧ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 11 ಅರ್ಜಿ ಸಲ್ಲಿಸಲು ಕೊನೆಯ ದಿನ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವ್ಯಾಪ್ತಿಗೆ ಒಳಪಡುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ/ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗಾಗಿ ಈ ತಾತ್ಕಾಲಿಕ ನೇಮಕಾತಿ ನಡೆಯಲಿದೆ. ಜಿಲ್ಲೆಯ ವಸತಿ ಶಾಲೆಗಳಲ್ಲಿ ಇಂಗ್ಲಿಷ್-2, ಹಿಂದಿ-2, ಗಣಿತ-3, ವಿಜ್ಞಾನ-2, ಸಮಾಜ ವಿಜ್ಞಾನ-1, ಕಂಪ್ಯೂಟರ್-1, ದೈಹಿಕ ಶಿಕ್ಷಣ-4 ಹುದ್ದೆಗಳು ಸೇರಿ ಒಟ್ಟು 15 ಹುದ್ದೆಗಳು ಖಾಲಿ ಇವೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಪದವಿ ಹಾಗೂ ಬಿ.ಇಡಿ ಪದವಿ ಪಡೆದಿರಬೇಕು. ಇದರೊಂದಿಗೆ ಟಿ.ಇ.ಟಿ ಉತ್ತೀರ್ಣರಾಗಿರುವುದು ಕಡ್ಡಾಯ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಮಾಸಿಕ ಗೌರವಧನ ನೀಡಲಾಗುವುದು. ಈ ನೇಮಕಾತಿಯು ಸಂಪೂರ್ಣ ತಾತ್ಕಾಲಿಕವಾಗಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಅಥವಾ ಖಾಯಂ ಶಿಕ್ಷಕರು ನೇಮಕಗೊಳ್ಳುವವರೆಗೆ ಮಾತ್ರ ಜಾರಿಯಲ್ಲಿರುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಇದೇ ಜೂನ್ 11ರ ಒಳಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸರ್ಕಾರಿ ವಿಜ್ಞಾನ ಕಾಲೇಜು ಮುಂಭಾಗ, ಬಿ.ಡಿ. ರಸ್ತೆ, ಚಿತ್ರದುರ್ಗ ಇಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08194-222937 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಹೊಸ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಪಿ.ಯು.ಸಿ, ಡಿಪ್ಲೊಮಾ ಹಾಗೂ ಐ.ಟಿ.ಐ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಅವಕಾಶ ಕಲ್ಪಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವೆಬ್‍ಸೈಟ್ https://shp.karnataka.gov.in ನಲ್ಲಿ ಆನ್‍ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ.ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗಾಗಿ ವಿದ್ಯಾರ್ಥಿಗಳು ಹತ್ತಿರದ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ, ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳು ಮತ್ತು ಅಲ್ಪಸಂಖ್ಯಾತರ ಜಿಲ್ಲಾ ಅಥವಾ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

