ಕುಸ್ತಿಪಟುಗಳ ಪರ ಒಗ್ಗಟ್ಟಿನ ಪ್ರದರ್ಶನ ತೋರಿದ ರೈತ ಮುಖಂಡರು; ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕೆ 15 ದಿನಗಳ ಗಡುವು

ನವದೆಹಲಿ: ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಆರೋಪ ಹೊತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ಅಗ್ರ ಕುಸ್ತಿಪಟುಗಳ ಪರ, ಇದೀಗ ರೈತ, ಕಾರ್ಮಿಕ ಸಂಘಟನೆಗಳ ಮುಖಂಡರು ನಿಂತಿದ್ದಾರೆ.

ಬಿಜೆಪಿ ಸಂಸದರೂ ಆಗಿರುವ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತ ಮುಖಂಡರು ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗೆ ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದರು. ಪೋಕ್ಸೋ ಕಾಯ್ದೆಯಡಿ ಒಂದು ಪ್ರಕರಣ ಸೇರಿದಂತೆ ಎರಡು ಎಫ್‌ಐಆರ್‌ಗಳನ್ನು ಎದುರಿಸುತ್ತಿರುವ ಫೆಡರೇಶನ್ ಮುಖ್ಯಸ್ಥರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡ ರಾಕೇಶ್ ಟಿಕಾಯತ್, ಕುಸ್ತಿಪಟುಗಳು ತಮ್ಮ ಆಂದೋಲನವನ್ನು ಮುಂದುವರೆಸಬೇಕು. ಮೇ 21 ರೊಳಗೆ ಬ್ರಿಜ್ ಭೂಷಣ್ ಅವರನ್ನು ಬಂಧಿಸದಿದ್ದರೆ, ಮುಂದಿನ ಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಕುಸ್ತಿಪಟುಗಳಿಗೆ ಅವಮಾನ ಮಾಡಿದರೆ ಸಹಿಸುವುದಿಲ್ಲ ಎಂದು ಹೇಳಿದರು.

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಹಲವಾರು ಪ್ರಮುಖ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಿ, ಫೆಡರೇಶನ್‌ನಿಂದ ಹೊರಹಾಕುವಂತೆ ಕೋರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ತಮ್ಮ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಬ್ರಿಜ್ ಭೂಷಣ್ ಸಿಂಗ್ ಹೇಳಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಸಿ ಟಿವಿಗಳ ಮೂಲಕ ಪ್ರತಿಭಟನಾ ಸ್ಥಳದಲ್ಲಿನ ಚಟುವಟಿಕೆಗಳನ್ನು ಗಮನಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read