ಬೆಂಗಳೂರು: ರಾಜ್ಯ ಸರ್ಕಾರ ಆರ್.ಎಸ್.ಎಸ್ ಚಟುವಟಿಕೆಗಳಿಗೆ ಅಂಕುಷ ಹಾಕಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ಸಜ್ಜಾಗಿದೆ. ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಶಾಸಕ ಅಶ್ವತ್ಥ ನಾರಾಯಣ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘ-ಸಂಸ್ಥೆಗಳು ಪೂರ್ವಾನುಮತಿ ಪಡೆಯದೇ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹ್ತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್.ಎಸ್.ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಅಶ್ವತ್ಥ ನಾರಾಯಣ, ಸರ್ಕಾರದ ಇಂತಹ ನಿರ್ಧಾರ ಖಂಡನೀಯ. ಬಿಜೆಪಿ ಇದರ ವಿರುದ್ಧ ಹೋರಾಟ ನಡೆಸಲಿದೆ ಎಂದಿದ್ದಾರೆ.
ಯಾವುದೇ ಕ್ಷಣದಲ್ಲಾದರೂ ಸರ್ಕಾರದ ವಿರುದ್ಧ ಹೋರಾಟ ಪ್ರಾರಂಭಿಸುತ್ತೇವೆ. ಆರ್.ಎಸ್.ಎಸ್ ಗೆ ನಿರ್ಬಂದ ಹೇರುವ ಕ್ರಮ ಸರಿಯಲ್ಲ. ಪ್ರಜಾಪ್ರಭುತ್ವದ ಕಗ್ಗೊಲೆ ಕಾಂಗ್ರೆಸ್ ಸಂಸ್ಕೃತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರ ಸಿಕ್ಕಿದೆ ಎಂದು ಇಂತಹ ಕೆಟ್ಟ ಆಡಳಿತ ಮಾಡಬೇಡಿ. ಈ ರೀತಿ ದುರಾಡಳಿತ ನಡೆಸುವುದು ಸರಿಯಲ್ಲ. ಇದೊಂದು ಜನವಿರೋಧಿ ನೀತಿಯಾಗುತ್ತದೆ. ಬಿಜೆಪಿ ಸರ್ಕಾರದ ಕ್ರಮದ ವಿರುದ್ಧ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದ್ದಾರೆ.