HomeIndiaBig Shock: ಡಿಕೆಶಿ ಉಸ್ತುವಾರಿ ಹೊತ್ತಿರುವ ರಾಜ್ಯದ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿಜೆಪಿಗೆ!

Big Shock: ಡಿಕೆಶಿ ಉಸ್ತುವಾರಿ ಹೊತ್ತಿರುವ ರಾಜ್ಯದ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿಜೆಪಿಗೆ!

ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಕಾಂಗ್ರೆಸ್‌ ಪಕ್ಷಕ್ಕೆ ಬಿಗ್ ಶಾಕ್. ಹೌದು ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿಜೆಪಿ ಸೇರಲಿದ್ದಾರೆ. ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಣೆ ಮಾಡಿದ್ದಾರೆ.

ಅಸ್ಸಾಂನ 126 ವಿಧಾನಸಭಾ ಕ್ಷೇತ್ರಗಳಿಗೆ ಮಾರ್ಚ್‌ ಅಂತ್ಯ ಅಥವ ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್‌ನಲ್ಲಿ ಕೇಂದ್ರ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡಲಿದೆ. 

ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಬಿಜೆಪಿ ಸೇರುವ ನಿರ್ಧಾರ ಕೈಗೊಂಡಿದ್ದಾರೆ. ಅವರು ಮಂಗಳವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭೇಟಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಭೇಟಿ ಬಳಿಕ ಮಾತನಾಡಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “ದಶಕಗಳ ಕಾಲ ತಾವು ಸೇವೆ ಸಲ್ಲಿಸಿದ ಪಕ್ಷವನ್ನು ತೊರೆಯುವ ನಿರ್ಧಾರದ ಬಗ್ಗೆ ಮತ್ತೊಮ್ಮೆ ಯೋಚಿಸಲು ಮತ್ತು ಸಮಯ ತೆಗೆದುಕೊಳ್ಳುವಂತೆ ಭೂಪೇನ್ ಬೋರಾ ಅವರಿಗೆ ತಿಳಿಸಲಾಯಿತು” ಎಂದು ಹೇಳಿದ್ದಾರೆ.

ಆದರೆ ಭೂಪೇನ್ ಕುಮಾರ್ ಬೋರಾ ಫೆಬ್ರವರಿ 22ರಂದು ಬಿಜೆಪಿ ಸೇರ್ಪಡೆಯಾಗುವುದಾಗಿ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಅಸ್ಸಾಂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರು ಪಕ್ಷ ಬಿಟ್ಟು ಬಿಜೆಪಿ ಸೇರುವುದು ಖಚಿತವಾಗಿದೆ.

“ಮುಂಬರುವ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವನ್ನು ತೊರೆಯುವ ನಿರ್ಧಾರಕ್ಕೆ ಭೂಪೇನ್ ಬೋರಾ ಅವರು ಬದ್ಧರಾಗಿದ್ದು, ಫೆಬ್ರವರಿ 22 ರಂದು ಬಿಜೆಪಿಗೆ ಸೇರಲಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆಯನ್ನು ಹಿಂಪಡೆಯದಿರಲು ನಿರ್ಧರಿಸಿದ್ದಾರೆ ಮತ್ತು ನಮ್ಮ ಚರ್ಚೆಯ ನಂತರ ಅವರು ಬಿಜೆಪಿ ಸೇರಲು ತೀರ್ಮಾನಿಸಿದ್ದಾರೆ” ಎಂದು ಶರ್ಮಾ ತಿಳಿಸಿದ್ದಾರೆ.

“ರಾಹುಲ್ ಗಾಂಧಿ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಗೌರವ್ ಗೊಗೊಯ್ ಮನವೊಲಿಕೆಯ ಪ್ರಯತ್ನಗಳನ್ನು ನಡೆಸಿದ್ದರು. ಆದರೆ ತಮ್ಮ ಜೊತೆ ಒಂದು ಗಂಟೆ ಕಾಲ ನಡೆಸಿದ ಸಭೆಯ ನಂತರ ಬೋರಾ ಅವರು ತಮ್ಮ ನಿರ್ಧಾರಕ್ಕೆ ಬದ್ಧರಾಗಿರಲು ನಿರ್ಧರಿಸಿದ್ದಾರೆ” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ 2021ರಲ್ಲಿ ಭೂಪೇನ್ ಕುಮಾರ್ ಬೋರಾ ಅವರನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿತ್ತು. ಆದರೆ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಅವರು ರಾಜೀನಾಮೆ ನೀಡಿದ್ದರು.

ಕಳೆದ ವರ್ಷ ಕಾಂಗ್ರೆಸ್ ಗೌರವ್ ಗೊಗೊಯ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿತ್ತು. ಅಚ್ಚರಿಯ ಸಂಗತಿ ಎಂದರೆ ಹಿಮಂತ ಬಿಸ್ವಾ ಶರ್ಮಾ ಅವರು ಸಹ ಕಾಂಗ್ರೆಸ್‌ನಲ್ಲಿದ್ದು, ಅಲ್ಲಿ ಅವರನ್ನು ಕಡೆಗಣಿಸಿದ ಕಾರಣಕ್ಕೆ ಬಿಜೆಪಿ ಸೇರಿದ್ದರು. ಈಗ ಅವರು ಅಸ್ಸಾಂ ಮುಖ್ಯಮಂತ್ರಿ.

ಹಿಮಂತ ಬಿಸ್ವಾ ಶರ್ಮಾ ಮಾತನಾಡಿ, “ಭೂಪೇನ್ ಬೋರಾ ಅವರು ಅನುಭವಿಸಿದ ಅದೇ ನೋವನ್ನು ನಾನೂ ಕೂಡ ಅನುಭವಿಸಿದ್ದೇನೆ. ಕಾಂಗ್ರೆಸ್ ಪಕ್ಷವು ಗಂಭೀರವಾದ ಸಮಸ್ಯೆಗಳನ್ನು ಎದುರಿಸುತ್ತಿದೆ, ಆದರೆ ಅವರು ಅವುಗಳನ್ನು ಬಗೆಹರಿಸಲು ಬಯಸುತ್ತಿಲ್ಲ. ಅವರು ಕೇವಲ ಒಬ್ಬ ನಿರ್ದಿಷ್ಟ ವ್ಯಕ್ತಿಯನ್ನು ಓಲೈಸಲು ಬಯಸುತ್ತಾರೆ” ಎಂದು ಹೇಳಿದರು.

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಈಗ ಮಾಜಿ ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿ ಸೇರುತ್ತಿದ್ದು, ಚುನಾವಣೆಯಲ್ಲಿ ಯಾವ ಪರಿಣಾಮ ಬೀರಲಿದೆ? ಕಾದು ನೋಡಬೇಕಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular