HomeLatest Newsಅಯೋಧ್ಯಾ ರಾಮ ಮಂದಿರದ ದೇಣಿಗೆ ಹಗರಣ: 40 ಸಿಬ್ಬಂದಿಗಗಳು ವಜಾ: SITಯಿಂದ ಇಂದು ವರದಿ ಸಲ್ಲಿಕೆ

ಅಯೋಧ್ಯಾ ರಾಮ ಮಂದಿರದ ದೇಣಿಗೆ ಹಗರಣ: 40 ಸಿಬ್ಬಂದಿಗಗಳು ವಜಾ: SITಯಿಂದ ಇಂದು ವರದಿ ಸಲ್ಲಿಕೆ

ಅಯೋಧ್ಯೆ: ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ನೀಡಿದ ಕಾಣಿಕೆ ಹಣ ಹಾಗೂ ಆಭರಣಗಳ ಎಣಿಕೆಯಲ್ಲಿ ಭಾರಿ ಹಗರಣ ನಡೆದಿರುವ ಆರೋಪ ಕೇಳಿಬಂದಿದೆ. ಕಾಣಿಕೆ ಹಣ ಹಾಗೂ ಆಭರಣ ಕಳ್ಳತನವಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ, ದೇಣಿಗೆ ಎಣಿಕೆ ಪ್ರಕ್ರಿಯೆಯಲ್ಲಿದ್ದ ಸುಮಾರು 40 ಸಿಬ್ಬಂದಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ ವಜಾಗೊಳಿಸಲಾಗಿದೆ.

ಅಯೋಧ್ಯಾ ರಾಮ ಮಂದಿರದ ಕಾಣಿಕೆ ಹಣ ಎಣಿಕೆಗೆ ಬ್ಯಾಂಕ್ ಟ್ರಸ್ಟ್ ಈಗ ಸಂಪೂರ್ಣ ಹೊಸ ಸಿಬ್ಬಂದಿಯನ್ನು ನೇಮಕ ಮಾಡಿದ್ದು, ಹಣ ಮತ್ತು ಆಭರಣಗಳ ಎಣಿಕೆಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ಇರಿಸಲಾಗಿದೆ.

ಮತ್ತೊಂದೆಡೆ, ಆರು ದಿನಗಳ ಕಾಲ ಅಯೋಧ್ಯೆಯಲ್ಲೇ ಬೀಡುಬಿಟ್ಟು ತನಿಖೆ ನಡೆಸಿದ ವಿಶೇಷ ತನಿಖಾ ತಂಡ (SIT) ಇಂದು ತನ್ನ ಪ್ರಾಥಮಿಕ ವರದಿಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಲ್ಲಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್‌ಐಟಿ ತಂಡವು ದೇಣಿಗೆಯ ಹಳೆಯ ದಾಖಲೆಗಳು, ಸಿಸಿಟಿವಿ ದೃಶ್ಯಾವಳಿಗಳು, ನಗದು ಎಣಿಕೆ ಮಾಡುವ ವಿಧಾನಗಳು ಮತ್ತು ಆಭರಣಗಳ ವಿವರಗಳನ್ನು ಸಂಪೂರ್ಣವಾಗಿ ಪರಿಶೀಲಿಸಿದೆ. ದೇವಸ್ಥಾನದ ಟ್ರಸ್ಟ್‌ಗೆ ಸಂಬಂಧಿಸಿದ ಪ್ರಮುಖರು, ಅರ್ಚಕರು, ಬ್ಯಾಂಕ್ ಅಧಿಕಾರಿಗಳು ಮತ್ತು ನಗದು ನಿರ್ವಹಣಾ ಸಿಬ್ಬಂದಿ ಸೇರಿದಂತೆ 100 ಕ್ಕೂ ಹೆಚ್ಚು ಜನರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ತನಿಖೆ ಮುಗಿಯುವವರೆಗೆ ವಿಚಾರಣೆಗೆ ಒಳಗಾದ ಯಾರೂ ಕೂಡ ಅಯೋಧ್ಯೆ ನಗರವನ್ನು ಬಿಟ್ಟು ಹೊರಗೆ ಹೋಗಬಾರದು ಎಂದು ಎಸ್‌ಐಟಿ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ದೀರ್ಘಕಾಲದ ಸಹಚರ ಎನ್ನಲಾದ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಎಂಬಾತನನ್ನು ಎಸ್‌ಐಟಿ ಪದೇ ಪದೇ ವಿಚಾರಣೆ ನಡೆಸಿದೆ. ಈತನ ಆಪ್ತರು, ಸಂಬಂಧಿಕರು ಹಾಗೂ ಆಸ್ತಿಪಾಸ್ತಿಗಳ ವಿವರವನ್ನೂ ಕಲೆಹಾಕಲಾಗುತ್ತಿದೆ.

ಈ ತನಿಖೆಯು ಕೇವಲ ಕಾಣಿಕೆ ಹಣದ ದುರುಪಯೋಗಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ ಟ್ರಸ್ಟ್ ವಿವಿಧ ಹಂತಗಳಲ್ಲಿ ಮಾಡಿದ ಖರೀದಿಗಳು ಮತ್ತು ದೇವಸ್ಥಾನದ ನಿರ್ಮಾಣ ಸಾಮಗ್ರಿಗಳ ಖರೀದಿಯಲ್ಲಿ ನಡೆದಿರುವ ವ್ಯವಹಾರಗಳ ಮೇಲೂ ತನಿಖೆ ನಡೆಯುತ್ತಿದೆ.

ಮೂಲಗಳ ಪ್ರಕಾರ, 2025 ರ ಆರಂಭದಲ್ಲಿ ಪ್ರಯಾಗ್‌ರಾಜ್‌ನಲ್ಲಿ ನಡೆದ ‘ಮಹಾಕುಂಭ ಮೇಳ’ದ ಸಮಯದಲ್ಲಿ ಈ ದೊಡ್ಡ ವಂಚನೆ ನಡೆದಿದೆ. ಆ ಎರಡು ತಿಂಗಳ ಅವಧಿಯಲ್ಲಿ ಪ್ರತಿದಿನ ಸುಮಾರು 10 ಲಕ್ಷ ಭಕ್ತರು ರಾಮ ಮಂದಿರಕ್ಕೆ ಭೇಟಿ ನೀಡುತ್ತಿದ್ದರು. ಭಕ್ತರ ದಟ್ಟಣೆಗೆ ದೇವಸ್ಥಾನದ ದೇಣಿಗೆ ಪೆಟ್ಟಿಗೆಗಳು ಕೇವಲ ಎರಡು ಗಂಟೆಗಳಲ್ಲಿ ನೋಟುಗಳಿಂದ ತುಂಬಿ ಹೋಗುತ್ತಿದ್ದವು. ಇದೇ ಸಮಯವನ್ನು ಬಳಸಿಕೊಂಡು ದೊಡ್ಡ ಮಟ್ಟದಲ್ಲಿ ಹಣ ಲೂಟಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇಂದು ಸಿಎಂ ಯೋಗಿ ಅವರಿಗೆ ವರದಿ ಸಲ್ಲಿಕೆ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular