ಬಾಗಲಕೋಟೆ: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ನಸೀರ್ ಅಹ್ಮದ್ ಮತ್ತು ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇದೀಗ ಬಾಗಲಕೋಟೆಯಲ್ಲೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಂಡಿದೆ.
ಬಾಗಲಕೋಟೆ ಉಪಚುನಾವಣೆಯಲ್ಲೂ ಪಕ್ಷವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮೂವರು ಪ್ರಭಾವಿ ಕಾಂಗ್ರೆಸ್ ಮುಖಂಡರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಬಾಗಲಕೋಟೆ ಉಪಚುನಾವಣೆಯಲ್ಲಿ ಕಮತಗಿ ಪಟ್ಟಣದ ಮುಖಂಡರು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಕೆಲಸ ಮಾಡುವ ಬದಲು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಬೆಂಬಲ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ್ ಕಡ್ಲಿಮಟ್ಟಿ ಹಾಗೂ ಕಮತಗಿ ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ್ ಜಮಖಂಡಿ ಮತ್ತು ಗುರುಲಿಂಗ ಪಾಟೀಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅಮಾನತುಗೊಳಿಸಿ ಆದೇಶಿ ಹೊರಡಿಸಿದ್ದಾರೆ.
ಸ್ಥಳೀಯ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಸ್.ಎನ್. ರಾಂಪುರ ಅವರು ಈ ಮುಖಂಡರ ವಿರುದ್ಧ ದೂರು ನೀಡಿ, ಉಚ್ಚಾಟನೆಗೆ ಪತ್ರ ಬರೆದಿದ್ದರು. ದೂರಿನ ಆಧಾರದ ಮೇಲೆ ಜಿಲ್ಲಾಧ್ಯಕ್ಷರು ಕಾರಣ ಕೇಳಿ ನೋಟಿಸ್ ನೀಡಿದ್ದರೂ, ಮುಖಂಡರಿಂದ ಯಾವುದೇ ಸಮರ್ಪಕ ಉತ್ತರ ಬಾರದ ಕಾರಣ ಅಂತಿಮವಾಗಿ ಅಮಾನತು ಕ್ರಮ ಕೈಗೊಳ್ಳಲಾಗಿದೆ.
ಒಟ್ಟಾರೆ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೈ ನಾಯಕರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಶಿಸ್ತುಕ್ರಮ ಕೈಗೊಂಡು ಅಮಾನತುಗೊಳಿಸಿ ಆದೇಶ ಹೊರಡಿಸುವ ಮೂಲಕ ಬಿಸಿ ಮುಟ್ಟಿಸಿದೆ.

