ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ-ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 25 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರಿನ 42ನೇ ಎಸಿಜೆ ಎಂ ಕೋರ್ಟ್ 25 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿಯ ಗನ್ ಮ್ಯಾನ್ ಗುರುಚರಣ ಸಿಂಗ್ ಸೇರಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿ ಒಟ್ಟು 26 ಜನರನ್ನು ಬಂಧಿಸಲಾಗಿತ್ತು. ಇದೀಗ ಆರೋಪಿ ಗುರುಚರಣ ಸಿಂಗ್ ನನ್ನು ಹೊರತುಪಡಿಸಿ ಉಳಿದ ೨೫ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ ಎಂದು ತಿಳಿದುಬಂದಿದೆ.
ಜನವರಿ 1ರಂದು ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕಾಗಿ ಶಾಸಕ ಜನಾರ್ಧನ ರೆಡ್ಡಿ ಮನೆ ಬಳಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ನಡೆದಿತ್ತು. ಈ ವೇಳೆ ಗನ್ ಮ್ಯಾನ್ ಹಾರಿಸಿದ್ದ ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬಾತ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ 26 ಜನರನ್ನು ಬಂಧಿಸಲಾಗಿತ್ತು.

