HomeLatest Newsಫೆಕ್ಸ್ ಗಲಾಟೆ: ಬಿಜೆಪಿಯಿಂದ ರಾಜಶೇಖರ್‌ ರೆಡ್ಡಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

ಫೆಕ್ಸ್ ಗಲಾಟೆ: ಬಿಜೆಪಿಯಿಂದ ರಾಜಶೇಖರ್‌ ರೆಡ್ಡಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

ಬಳ್ಳಾರಿಯಲ್ಲಿ ನಡೆದ ವಾಲ್ಮೀಕಿ ಪುತ್ಥಳಿ ಅನಾವರಣ ಬ್ಯಾನರ್ ಅಳವಡಿಕೆ ಗಲಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಮೃತಪಟ್ಟಿದ್ದರು. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಈ ಗಲಭೆ ಖಂಡಿಸಿ ಬಿಜೆಪಿ ಬಳ್ಳಾರಿ ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಎಪಿಎಂಸಿ ಕೃಷಿ ಮಾರುಕಟ್ಟೆಯ ಆವರಣದಲ್ಲಿರುವ ಕವರ್ಡ್ ಆಕ್ಷನ್ ಪ್ಲಾಟ್‌ಫಾರಂನಲ್ಲಿ ಪ್ರತಿಭಟನಾ ಸಭೆ ನಡೆಯುತ್ತಿದೆ.

ಈ ಸಭೆಗೂ ಮುನ್ನ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ನಾಯಕರು ಗುಂಡೇಟಿನಿಂದ ಮೃತಪಟ್ಟ ರಾಜಶೇಖರ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿದ್ದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಪರಿಹಾರದ ಚೆಕ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಬಿ.ವೈ.ವಿಜಯೇಂದ್ರ ಪೋಸ್ಟ್ ಹಾಕಿದ್ದು, ‘ಬಳ್ಳಾರಿಯಲ್ಲಿ ಫ್ಲೆಕ್ಸ್ ಅಳವಡಿಕೆ ಸಂಬಂಧ ನಡೆದ ಕರ್ನಾಟಕ ಕಾಂಗ್ರೆಸ್ ಪ್ರಾಯೋಜಿತ ಗಲಭೆಯಲ್ಲಿ ಸಾವನ್ನಪ್ಪಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಅವರ ಮನೆಗೆ ತೆರಳಿ, ತೀವ್ರ ಸಂತಾಪ ಸೂಚಿಸಿ, ಅವರ ಕುಟುಂಬಕ್ಕೆ ಬಿಜೆಪಿ ಕರ್ನಾಟಕ ವತಿಯಿಂದ 10 ಲಕ್ಷ ರೂ. ಪರಿಹಾರ ನೀಡಲಾಯಿತು’ ಎಂದು ಹೇಳಿದ್ದಾರೆ.

ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕರಾದ ಜನಾರ್ದನ ರೆಡ್ಡಿ, ಮಾಜಿ ಸಚಿವ ಬಿ.ಶ್ರೀರಾಮುಲು ಸೇರಿದಂತೆ ಪಕ್ಷದ ನಾಯಕರು, ಪ್ರಮುಖರು, ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

‘ಎಷ್ಟೇ ಮೊತ್ತದ ಪರಿಹಾರ ನೀಡಿದರೂ ಕುಟುಂಬಕ್ಕೆ ನ್ಯಾಯ ಕೊಡಿಸಲು ಸಾಧ್ಯವಿಲ್ಲ. ರಾಜಶೇಖರ್ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆದು, ರಾಜಶೇಖರ್ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಾದರೆ CBI ತನಿಖೆಯನ್ನೇ ಮಾಡಿಸಬೇಕು ಎಂದು ಆಗ್ರಹಿಸುವೆ’ ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರು ಮತ್ತು ಜನಾರ್ದನ ರೆಡ್ಡಿ, ಶ್ರೀರಾಮುಲು ಬೆಂಬಲಿಗರ ನಡುವೆ ಗಲಾಟೆಯಾಗಿತ್ತು.

ಈ ಸಂದರ್ಭದಲ್ಲಿ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಸಾವನ್ನಪ್ಪಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದ್ದು, ಶಾಸರ ಭರತ್ ರೆಡ್ಡಿ ಬೆಂಬಲಿಗ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳನ್ನು ಬಂಧಿಸಲಾಗಿದೆ.

ಇದೇ ವಿಚಾರದಲ್ಲಿ ಇಂದು ಬೃಹತ್ ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿದೆ. ಈ ಗಲಭೆ ಪ್ರಕರಣ ಮುಂದಿಟ್ಟುಕೊಂಡು ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಆರ್.ಅಶೋಕ, “ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ರಾಜ್ಯ ಹೊತ್ತಿ ಉರಿಯುತ್ತಿದೆ. ಜನಸಾಮಾನ್ಯರಿಗೆ, ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಬಳ್ಳಾರಿಯಲ್ಲಿ ಶಾಸಕರನ್ನೇ ಕೊಲ್ಲಲು ಯತ್ನಿಸಲಾಗಿತ್ತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ” ಎಂದು ಆರೋಪಿಸಿದರು.

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂಬುದಕ್ಕೆ ಈ ರಕ್ತಸಿಕ್ತ ಘಟನೆಯೇ ಸಾಕ್ಷಿ. ಸಹಾಯಧನ ಆ ನೊಂದ ಕುಟುಂಬಕ್ಕೆ ತಾತ್ಕಾಲಿಕ ಪರಿಹಾರ ನೀಡಬಹುದೇ ಹೊರತು ಕಳೆದುಕೊಂಡ ಜೀವವನ್ನು ಮರಳಿ ತರಲಾರದು. ಆ ಸಂತ್ರಸ್ತ ಕುಟುಂಬಕ್ಕೆ ಸಿಗಬೇಕಾದ ನಿಜವಾದ ನ್ಯಾಯವೆಂದರೆ ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ” ಎಂದು ಅವರು ಹೇಳಿದ್ದಾರೆ.

“ಸ್ಥಳೀಯ ಪೊಲೀಸರ ಮೇಲೆ ಸರ್ಕಾರದ ಒತ್ತಡವಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಆದ್ದರಿಂದ ಈ ಪ್ರಕರಣದ ಸಮಗ್ರ ಸತ್ಯಾಂಶ ಹೊರಬರಲು ಕೂಡಲೇ CBI ತನಿಖೆಗೆ ಒಪ್ಪಿಸಬೇಕು ಎಂಬುದು ನಮ್ಮ ಆಗ್ರಹ ತಪ್ಪಿತಸ್ಥರು ಎಷ್ಟೇ ಪ್ರಭಾವಿಯಾಗಿದ್ದರೂ ಅವರಿಗೆ ಶಿಕ್ಷೆಯಾಗುವವರೆಗೂ ನಾವು ವಿಶ್ರಮಿಸುವುದಿಲ್ಲ” ಎಂದು ಅಶೋಕ ತಿಳಿಸಿದ್ದಾರೆ.

“ಕಾಂಗ್ರೆಸ್‌ ನಾಯಕರೇ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ರೆಡ್ಡಿ ಅವರನ್ನು ಕೊಲೆ ಮಾಡಿದ್ದಾರೆ. ಕಳೆದು ಹೋದ ಜೀವ ಮರಳಿ ಬರುವುದಿಲ್ಲ, ಆದರೆ ಸಾವಿಗೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯ. ಪ್ರಕರಣವನ್ನು ಸಿಬಿಐ ಮೂಲಕ ತನಿಖೆ ನಡೆಸಬೇಕು” ಎಂದು ವಿಜಯೇಂದ್ರ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular