ಬಳ್ಳಾರಿ: ಪ್ರಸಕ್ತ ವರ್ಷದ ಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಳ್ಳಾರಿ ಜಿಲ್ಲೆಯ ಕಂಪ್ಲಿ ಹಾಗೂ ಕುಡುತಿನಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಸೂಕ್ಷ್ಮ ಗ್ರಾಮಗಳಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ.
ಕಂಪ್ಲಿ ಪೊಲೀಸ್ ಠಾಣಾ ಸರಹದ್ದಿಗೆ ಒಳಪಡುವ ನಂ.15 ಗೋನಾಳ, ನಂ.10 ಮುದ್ದಾಪುರ ಹಾಗೂ ಕುಡುತಿನಿ ಠಾಣಾ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಈ ಮೂರು ಗ್ರಾಮಗಳಲ್ಲಿ ಪ್ರಕ್ಷುಬ್ಧ ವಾತಾವರಣವಿದ್ದು, ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದರೆ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ ಎಂಬುದಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಹಾಗೂ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ನಿರ್ಬಂಧ ಹೇರುವಂತೆ ಪೊಲೀಸ್ ಇಲಾಖೆ ಕೋರಿರುವ ಕಾರಣ, ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಮೇಲ್ಕಂಡ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಆದೇಶಿಸಿದೆ.
ನಿಷೇಧಿತ ಪ್ರದೇಶ ವ್ಯಾಪ್ತಿಯಲ್ಲಿ, ಹಬ್ಬದ ನೆಪದಲ್ಲಿ ಯಾವುದೇ ರೀತಿಯ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯವಾಗಿ ಜನಸಂದಣಿ ಸೇರುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ಸಿಸ್ಟಂ ಸಂಪೂರ್ಣ ನಿಷೇಧ
ಬಳ್ಳಾರಿ: ಗೌರಿ-ಗಣೇಶ ಹಬ್ಬದ ಆಚರಣೆ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ, ಕಾನೂನು-ಸುವ್ಯವಸ್ಥೆ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬಳ್ಳಾರಿ ಜಿಲ್ಲೆಯಾದ್ಯಂತ ಡಿಜೆ ಮತ್ತು ಹೈ-ಬೇಸ್ ಸೌಂಡ್ ಸಿಸ್ಟಂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕೆ. ನಾಗೇಂದ್ರ ಪ್ರಸಾದ್ ಅವರು ಆದೇಶ ಹೊರಡಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023′ ರ ಕಲಂ 152 ಮತ್ತು 163 ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ. ಈ ನಿಷೇಧಾಜ್ಞೆಯು ಸೆ.14 ರಿಂದ ಶ್ರೀ ಗೌರಿ-ಗಣೇಶ ಹಬ್ಬ ಮುಕ್ತಾಯವಾಗುವವರೆಗೆ ಜಿಲ್ಲೆಯಾದ್ಯಂತ ಜಾರಿಯಲ್ಲಿರಲಿದೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಶೇಷವಾಗಿ ವಿಸರ್ಜನಾ ಮೆರವಣಿಗೆಗಳಲ್ಲಿ ಅತಿಯಾದ ಶಬ್ದ ಉಂಟುಮಾಡುವ ಡಿಜೆ ಬಾಕ್ಸ್ ಗಳಿಂದ ಉಂಟಾಗುವ ನಿರಂತರ ಶಬ್ದ ಮಾಲಿನ್ಯವು ವಯೋವೃದ್ಧರು, ಚಿಕ್ಕ ಮಕ್ಕಳು, ಬಾಣಂತಿಯರು ಹಾಗೂ ಹೃದಯ ಸಂಬAಧಿ ಕಾಯಿಲೆಗಳಿಂದ ಬಳಲುತ್ತಿರುವವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ವರದಿಯ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಸಿಸ್ಟಂ, ಹೈ-ಬೇಸ್ ಸಿಸ್ಟಂ, ಡಿಜೆ ಬಾಕ್ಸ್ ಗಳು ಹಾಗೂ ಹೆಚ್ಚಿನ ಶಬ್ದ ಉಂಟುಮಾಡುವ ಯಾವುದೇ ಧ್ವನಿವರ್ಧಕ ಉಪಕರಣಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

