HomeKarnatakaರಾಜ್ಯದಲ್ಲಿ ಬರದ ಪರಿಣಾಮ ಆಹಾರ ಉತ್ಪಾದನೆಗೆ ತೀವ್ರ ಹೊಡೆತ, ಶೇ. 82ರಷ್ಟು ನಷ್ಟ: ಜನರಿಗೆ ಆಹಾರಧಾನ್ಯ...

ರಾಜ್ಯದಲ್ಲಿ ಬರದ ಪರಿಣಾಮ ಆಹಾರ ಉತ್ಪಾದನೆಗೆ ತೀವ್ರ ಹೊಡೆತ, ಶೇ. 82ರಷ್ಟು ನಷ್ಟ: ಜನರಿಗೆ ಆಹಾರಧಾನ್ಯ ಕೊರತೆ ಆತಂಕ

ಬೆಂಗಳೂರು: ರಾಜ್ಯದಲ್ಲಿ ಬರದ ಪರಿಣಾಮ ಆಹಾರ ಉತ್ಪಾದನೆಗೆ ತೀವ್ರ ಹೊಡೆತ ಬಿದ್ದಿದ್ದು, ಶೇ.82ರಷ್ಟು ನಷ್ಟ ಸಂಭವಿಸಿದೆ. ಇದರ ಪರಿಣಾಮವಾಗಿ ಜನರಿಗೆ ಆಹಾರ ಧಾನ್ಯಗಳ ಕೊರತೆ ಎದುರಾಗುವ ಆತಂಕವಿದ್ದು, ಜಾನುವಾರುಗಳಿಗೆ ಅಗತ್ಯವಾದ ಮೇವಿನ ಲಭ್ಯತೆಯೂ ಕಡಿಮೆಯಾಗಿದೆ. ಇದರೊಂದಿಗೆ ಕುಡಿಯುವ ನೀರಿನ ಸಮಸ್ಯೆಯೂ ಗಂಭೀರ ಸ್ವರೂಪ ಪಡೆದುಕೊಂಡಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಬರದ ಪರಿಣಾಮ ಅತ್ಯಂತ ಗಂಭೀರವಾಗಿದ್ದು, ಆಹಾರ ಉತ್ಪಾದನೆ ಕುಂಠಿತಗೊಂಡಿರುವುದರ ಜೊತೆಗೆ ಜಾನುವಾರುಗಳಿಗೆ ಮೇವಿನ ಕೊರತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಸಂಕಷ್ಟವನ್ನು ನಿಭಾಯಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಅನುದಾನ ಪಡೆಯಲು ನಿರಂತರ ಪ್ರಯತ್ನ ನಡೆಸಲಾಗುತ್ತಿದೆ ಎಂದರು.

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ರೈತರೊಂದಿಗೂ ಚರ್ಚೆ ನಡೆಸಲಾಗಿದೆ. ಇತ್ತೀಚೆಗೆ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದ್ದರೂ ರಾಜ್ಯದ ಬಹುತೇಕ ಭಾಗಗಳಲ್ಲಿ ಬರದ ತೀವ್ರತೆ ಕಡಿಮೆಯಾಗಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಹಲವೆಡೆ ಟ್ಯಾಂಕರ್‌ ಗಳು ಮತ್ತು ಖಾಸಗಿ ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಆದರೆ ನೀರಿನ ಮೂಲಗಳೇ ಬತ್ತಿಹೋದರೆ ಟ್ಯಾಂಕರ್‌ಗಳಿಗೆ ನೀರು ತುಂಬಿಸಿ ಪೂರೈಸುವುದೂ ಕಷ್ಟವಾಗಲಿದೆ. ಪರಿಸ್ಥಿತಿ ಆ ಹಂತಕ್ಕೆ ತಲುಪುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದರು.

ಕೇಂದ್ರಕ್ಕೆ ಮೂರನೇ ಮನವಿ ಪತ್ರ ಸಲ್ಲಿಸಲು ಸಿದ್ಧತೆ : ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಗಳ ಪ್ರಕಾರ ಬರಪೀಡಿತ ಪ್ರದೇಶಗಳನ್ನು ಘೋಷಿಸಿ, ಬೆಳೆ ಹಾಗೂ ಇತರ ನಷ್ಟಗಳ ಅಂದಾಜು ಸಿದ್ಧಪಡಿಸಲಾಗುತ್ತದೆ. ಅದರ ಆಧಾರದಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿ (NDRF) ಮಾರ್ಗಸೂಚಿಗಳ ಅನ್ವಯ ಕೇಂದ್ರ ಸರ್ಕಾರದಿಂದ ಪರಿಹಾರದ ಅನುದಾನ ಕೋರಲಾಗುತ್ತದೆ ಎಂದರು.

ಈಗಾಗಲೇ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದ್ದು, ಮೂರನೇ ಮನವಿ ಪತ್ರವನ್ನು ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ. ಇನ್ನೊಂದು ಎರಡು ದಿನಗಳಲ್ಲಿ ಅದು ಸಿದ್ಧವಾಗಲಿದ್ದು, ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಮನವಿ ಪತ್ರ ಸಲ್ಲಿಸಲು ಮುಖ್ಯಮಂತ್ರಿಗಳು, ನಾನು ಅಥವಾ ನಿಯೋಗ ತೆರಳುವ ಬಗ್ಗೆ ಮುಖ್ಯಮಂತ್ರಿಗಳೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಹಿಂದೆ ಸರ್ವಪಕ್ಷ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿ ಕರೆದೊಯ್ಯುವ ಪ್ರಸ್ತಾಪವನ್ನು ಮುಖ್ಯಮಂತ್ರಿಗಳು ಮಾಡಿದ್ದರು. ಆದರೆ ವಿರೋಧ ಪಕ್ಷದವರು ನಿಯೋಗದಲ್ಲಿ ಭಾಗವಹಿಸುವ ಕುರಿತು ಭಿನ್ನ ನಿಲುವು ವ್ಯಕ್ತಪಡಿಸಿರುವುದರಿಂದ ಮುಂದಿನ ಕ್ರಮದ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಕೇಂದ್ರ ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಯಾದರೆ ಸಂಕಷ್ಟದಲ್ಲಿರುವ ರೈತರು ಹಾಗೂ ಇತರ ಸಂತ್ರಸ್ತರಿಗೆ ನೆರವು ಒದಗಿಸಲು ಅನುಕೂಲವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಬೇಕಾಗಿದೆ ಎಂದರು.

ಕೇಂದ್ರ ಸರ್ಕಾರದ ಅನುದಾನಕ್ಕಾಗಿ ಕಾಯದೆ ರಾಜ್ಯ ಸರ್ಕಾರ ತನ್ನ ಸಂಪನ್ಮೂಲಗಳಿಂದಲೇ ಬರ ಪರಿಹಾರ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುತ್ತಿದೆ. ಕುಡಿಯುವ ನೀರಿನ ಪೂರೈಕೆಗೆ ಈಗಾಗಲೇ ಅನುದಾನ ಒದಗಿಸಲಾಗಿದ್ದು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪರಿಸ್ಥಿತಿಯನ್ನು ನಿರ್ವಹಿಸುತ್ತಿದ್ದಾರೆ. ಅಗತ್ಯವಿರುವ ಕಡೆ ಟ್ಯಾಂಕರ್‌ಗಳು ಹಾಗೂ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದರು.

ವಿಬಿ ಜಿ ರಾಮ್ ಜಿ ಯೋಜನೆಯಡಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಇದುವರೆಗೆ ಒಂದು ಪೈಸೆಯೂ ಅನುದಾನ ಬಂದಿಲ್ಲ. ಆದರೂ ರಾಜ್ಯ ಸರ್ಕಾರವೇ ತನ್ನ ಸಂಪನ್ಮೂಲಗಳಿಂದ ಹಣ ಒದಗಿಸಿ ಕಾಮಗಾರಿಗಳನ್ನು ಮುಂದುವರಿಸುತ್ತಿದೆ ಎಂದರು.

ರೈತರಿಗೆ ತಲಾ ₹2,500 ನೀಡುವುದಕ್ಕಾಗಿಯೇ ರಾಜ್ಯ ಸರ್ಕಾರಕ್ಕೆ ಸುಮಾರು ₹1,250 ಕೋಟಿ ವೆಚ್ಚವಾಗುತ್ತಿದ್ದು, ಈ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಇಷ್ಟೊಂದು ಆರ್ಥಿಕ ಹೊರೆಯ ನಡುವೆಯೂ ಜನರು ಹಾಗೂ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular