ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಾತ್ರಿಯಿಂದ ಹಿಡಿದು ಬೆಳಗಿನವರೆಗೂ ಧಾರಾಕಾರ ಮಳೆಯಾಗಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ವಿಪರೀತ ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ಕೊಂಚ ತಂಪೆರೆದಂತಾಗಿದೆ. ಈ ನಡುವೆ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳವರೆಗೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು, ರೈತರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕೊಪ್ಪಳ, ವಿಜಯಪುರ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆ ಬೀಳುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಬೀದರ್ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ.
ಚಿತ್ರದುರ್ಗ, ಬಳ್ಳಾರಿ, ಹಾಸನ, ರಾಮನಗರ, ಚಾಮರಾಜನಗರ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಮಾಹಿತಿ ನೀಡಿದೆ.
ನಾಳೆ ಕೂಡ ರಾಜ್ಯದ ಹಲವೆಡೆ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಉತ್ತರ ಒಳನಡಿನ ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ದಕ್ಷಿಣ ಒಳನಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

