ಬೆಂಗಳೂರು: ಶಾಲೆಗಳ ಸಮಯ ಬದಲಾವಣೆ ಬಗ್ಗೆ ಹಲವರು ಮನವಿ ಮಾಡಿದ್ದು, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಆನೇಕಲ್ ತಾಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಶನಿವಾರ ಅತ್ತಿಬೆಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಗರದಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳ ಸಮಯ ಬದಲಾವಣೆ ಮಾಡುವಂತೆ ಹಲವರು ಮನವಿ ಮಾಡಿದ್ದಾರೆ. ಈ ಬಗ್ಗೆ ಪೋಷಕರು, ಶಿಕ್ಷಕರು, ಇಲಾಖೆಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸಂಚಾರ ದಟ್ಟಣೆಯಿಂದ ಶಾಲಾ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಅಲ್ಲದೇ ಮಕ್ಕಳ ಸುರಕ್ಷತೆ ಬಗ್ಗೆ ಪ್ರಶ್ನೆಯೂ ಇದೆ. ಈ ನಿಟ್ಟಿನಲ್ಲಿ ಶಾಲೆಗಳ ಸಮಯ ಬದಲಾವಣೆ ಬಗ್ಗೆ ಇಲಾಖೆಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಖಾಸಗಿ ಶಾಲೆ ಶಿಕ್ಷಕರಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕೆಂಬ ಬೇಡಿಕೆ ಬಂದಿದ್ದು, ಆರ್ಥಿಕ ಇಲಾಖೆಯ ಸಲಹೆ ಪಡೆದುಕೊಂಡು ಶೀಘ್ರವೇ ಅನುಷ್ಠಾನಗೊಳಿಸಲು ಸಚಿವ ಸಂಪುಟದ ಮುಂದೆ ತರುವುದಾಗಿ ಭರವಸೆ ನೀಡಿದ್ದಾರೆ. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ವಿವಿಧ ಇಲಾಖೆಗಳ ನಿರಕ್ಷೇಪಣಾ ಪತ್ರ ಪಡೆಯುವುದು ಸೇರಿದಂತೆ ಕೆಲವು ತಾಂತ್ರಿಕ ಸಮಸ್ಯೆಗಳಿದ್ದು ಇಂತಹ ಸಮಸ್ಯೆಗಳನ್ನು ಅರಿತು ಸೂಕ್ತ ಪರಿಹಾರ ರೂಪಿಸಲು ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ ರಚಿಸಿದ್ದ ಸದನ ಸಮಿತಿ ಅಧ್ಯಯನ ನಡೆಸಿ ಹಲವು ಶಿಫಾರಸುಗಳನ್ನು ಮಾಡಿದೆ. ಈ ಶಿಫಾರಸುಗಳ ಕುರಿತಾಗಿ ಪರಿಶೀಲನೆ ನಡೆಸಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯಮಟ್ಟದಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ನೀಡುವ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಖಾಸಗಿ ಶಾಲೆಯ ಅರ್ಹ ಶಿಕ್ಷಕರಿಗೂ ನೀಡಲಾಗುವುದು. ಪೋಷಕರು, ಆಡಳಿತ ಮಂಡಳಿ, ಪೊಲೀಸ್ ಇಲಾಖೆ, ಶಿಕ್ಷಕರು, ಸಂಬಂಧಿತ ಇಲಾಖೆಗಳೊಂದಿಗೆ ಚರ್ಚಿಸಿ ಶಾಲಾ ಸಮಯ ಬದಲಾವಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಶಿಕ್ಷಕರ ದಿನಾಚರಣೆ
ಆನೇಕಲ್ ತಾಲ್ಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಅತ್ತಿಬೆಲೆಯ ಸೆಂಟ್ ಫಿಲೋಮಿನಾಸ್ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, 6ನೇ ವಾರ್ಷಿಕೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಧು ಬಂಗಾರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಮುಂದೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ಅವರ ನೇತೃತ್ವದ ಸಮಿತಿ ಮಧ್ಯಂತರ ವರದಿ ನೀಡಿದ್ದು, ಈ ವರದಿಯಲ್ಲಿನ ಶಿಫಾರಸುಗಳ ಕುರಿತು ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ರಾಮೋಜಿಗೌಡ, ಶಾಸಕ ಬಿ. ಶಿವಣ್ಣ, ಕಾಮ್ಸ್ ಕಾರ್ಯದರ್ಶಿ ಶಶಿಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲೆಯ ಡಿಡಿಪಿಐ ಜಯಪ್ರಕಾಶ್ ಹಾಗೂ ಖಾಸಗಿ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

