ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಮಗಳ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರು ನಗರದಲ್ಲಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ಪಕ್ಷದ ನಾಯಕರು ಸಮಾರಂಭದಲ್ಲಿ ಪಾಲ್ಗೊಂಡು ನೂತನ ಜೋಡಿಗೆ ಶುಭ ಹಾರೈಸಿದರು.
ಬೆಂಗಳೂರಿನ ಜಯಮಹಲ್ ಮುಖ್ಯ ರಸ್ತೆಯಲ್ಲಿರುವ ಚಾಮರವಜ್ರದಲ್ಲಿ ಬಸವರಾಜ ಬೊಮ್ಮಾಯಿ ಪುತ್ರಿ ಅದಿತಿ ಬೊಮ್ಮಾಯಿ ಅವರ ನಿಶ್ಚಿತಾರ್ಥ ರೋಷನ್ ಸುಧೀರ್ ಅವರೊಂದಿಗೆ ಗುರುವಾರ ನಡೆಯಿತು.
ಈ ಕಾರ್ಯಕ್ರಮಕ್ಕೆ ವಿವಿಧ ಪಕ್ಷದ ನಾಯಕರನ್ನು ಬಸವರಾಜ ಬೊಮ್ಮಾಯಿ ಆಹ್ವಾನಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಿದ್ದರಾಮಯ್ಯ ಸಂಪುಟದ ವಿವಿಧ ಸಚಿವರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಪಕ್ಷದ ವಿವಿಧ ನಾಯಕರು ಆಗಮಿಸಿ, ಶುಭ ಹಾರೈಸಿದರು.
ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಸಮಾರಂಭಕ್ಕೆ ಆಗಮಿಸಿದ್ದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಹರತಾಳು ಹಾಲಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ಸಮಾರಂಭಕ್ಕೆ ಆಗಮಿಸಿ ನೂತನ ವಧು-ವರರಿಗೆ ಶುಭ ಹಾರೈಸಿದರು.
ತುಮಕೂರು ಸಂಸದ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಹ ಸಮಾರಂಭಕ್ಕೆ ಆಗಮಿಸಿದ್ದರು. ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಸಚಿವರು ಆಗಮಿಸಿದ್ದರು.

