ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಹಾವೇರಿಯಲ್ಲಿ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಜೆಟ್ ನಿಂದ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಬಹಳ ದೊಡ್ಡ ಪರಿಣಾಮ ಬೀರಲಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಕಳಪೆ ಬಜೆಟ್, ಅಭಿವೃದ್ದಿ ಶೂನ್ಯ ಪ್ರಗತಿ ರಹಿತವಾದ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್ ಎಂದರು.
1.32 ಲಕ್ಷ ಕೋಟಿ ಸಾಲ ಮಾಡಿ ಸುಮಾರು 25 ಸಾವಿರ ಕೋಟಿ ರೂ. ಹೊಸ ತೆರಿಗೆ ಹಾಕಿ 22 ಸಾವಿರ ಕೋಟಿ ರೂ. ಕೊರತೆ ಬಜೆಟ್ ಮಂಡನೆ ಮಾಡಿದ್ದಾರೆ. ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್. ಇದರಿಂದ ದೂರಗಾಮಿ ರಾಜದ ಹಣಕಾಸಿನ ಮೇಲೆ ಬಹಳ ದೊಡ್ಡ ಪರಿಣಾಮ ಬೀರಲಿದೆ. ರಾಜ್ಯವನ್ನು ಹತ್ತರಿಂದ 15 ವರ್ಷ ಹಿಂದೆ ತೆಗೆದುಕೊಂಡು ಹೋಗುತ್ತದೆ. ಇದರಿಂದ ನಿರಾಸೆಯಾಗಿದೆ 17 ಬಾರಿ ಬಜೆಟ್ ಮಂಡನೆ ಮಾಡಿರುವ ಸಿಎಂರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.
ಉದಾಹರಣೆಗೆ ನೀರಾವರಿಗೆ ಕೇವಲ 22 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ 25 ಸಾವಿರ ಕೋಟಿ ರೂ. ಮೀಸಲಿಡಬೇಕಿತ್ತು. ಆದರೆ, ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಆರೋಗ್ಯ, ಗ್ರಾಮೀಣಾಭಿವೃದ್ಧಿಗೆ ಅನುದಾನ ಕಡಿಮೆ ಇದೆ. ಇವರು ಯಾವ ರೀತಿಯ ಬಜೆಟ್ ಮಂಡನೆ ಮಾಡುತ್ತಾರೆ ಎಂದು ಪ್ರಶ್ನಿಸಿದರು

