ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ-ಬಿಡಿಎ ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ಬಿಡಿಎ ನೌಕರರ ಸಂಘದ ಅಧ್ಯಕ್ಷನೇ ಅಧಿಕಾರಿಗಳಿಗೆ ಧಮ್ಕಿ ಹಾಕಿ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ.
ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಿಡಿಎ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಎಂಬುವವರು ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಬಿಡಿಎ ಎಇಇ ಅಶೋಕ್ ಬಾಗಿ ಅವರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ, ಆಯುಕ್ತರ ಆದೇಶವನ್ನೇ ಪ್ರಶ್ನಿಸಿ ಮಂಜುನಾಥ್ ಗಲಾಟೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಘಟನೆ ಬಳಿಕ ಬಿಡಿಎ ಆಯುಕ್ತ ಮಹೇಶ್ವರ್ ರಾವ್ ಅವರು ತಕ್ಷಣವೇ ಮಂಜುನಾಥ್ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ. ಇಂತಹ ಪ್ರಕರಣಗಳು ಮರುಕಳಿಸಬಾರದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

