ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ದುರಂತ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ.
ಮರಕುಂಬಿ ಗ್ರಾಮದ ಬಳಿ ಇರುವ ಇನಾಮ್ ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ವಿಕ್ರಮ್ ಇನಾಮದಾರ್ ಎಂಬುವವರಿಗೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ ಪಿ ರಾಮರಾಜನ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

