ಬೆಂಗಳೂರು: ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಬೇಲ್’ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಸದ್ದು ಮಾಡುತ್ತಿದ್ದು, ಶಿವಣ್ಣನ ಖಾಕಿ ಅವತಾರ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.
ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಅವರು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನಲ್ಲಿನ ಶಿವಣ್ಣನ ಪವರ್‌ಫುಲ್ ಲುಕ್ ಹಾಗೂ ಖಡಕ್ ಸಂಭಾಷಣೆಗಳು ಅಭಿಮಾನಿಗಳಲ್ಲಿ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿವೆ.
ಘಟಾನುಘಟಿ ಕಲಾವಿದರ ದಂಡು
‘ಬೇಲ್’ ಚಿತ್ರದಲ್ಲಿ ಶಿವರಾಜ್‌ಕುಮಾರ್ ಅವರೊಂದಿಗೆ ಮಲಯಾಳಂ ನಟ ಜಯರಾಮ್, ಸಾಯಿಕುಮಾರ್, ಲೂಸ್ ಮಾದ ಯೋಗಿ, ದೀಕ್ಷಿತ್ ಶೆಟ್ಟಿ, ಸಂಜನಾ ಆನಂದ್ ಹಾಗೂ ಕಿರಣ್ ಶ್ರೀನಿವಾಸ್ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ.
ಟೀಸರ್‌ನಲ್ಲಿ ಕಾಣಿಸಿಕೊಂಡಿರುವ ಇವರ ಕಾಂಬಿನೇಷನ್ ಹಾಗೂ ಪವರ್‌ಫುಲ್ ಡೈಲಾಗ್‌ಗಳು ಸಿನಿಮಾದ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿವೆ.
ಅಜನೀಶ್ ಲೋಕನಾಥ್ ಸಂಗೀತ
ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಟೀಸರ್‌ನ ಹಿನ್ನೆಲೆ ಸಂಗೀತವೂ ಗಮನ ಸೆಳೆಯುತ್ತಿದೆ. ವೈದಿ ಅವರ ಛಾಯಾಗ್ರಹಣ ಹಾಗೂ ಶಶಾಂಕ್ ನಾರಾಯಣ ಅವರ ಸಂಕಲನ ಚಿತ್ರಕ್ಕಿದೆ.
ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ಅವರು ಚಿತ್ರವನ್ನು ನಿರ್ಮಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಪವನ್ ಒಡೆಯರ್ ಅವರೇ ಬರೆದಿದ್ದಾರೆ.
ಅಕ್ಟೋಬರ್ 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್
ಭಾರಿ ನಿರೀಕ್ಷೆ ಮೂಡಿಸಿರುವ ‘ಬೇಲ್’ ಸಿನಿಮಾ ಅಕ್ಟೋಬರ್ 2ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದೆ. ಖಾಕಿ ಅವತಾರದಲ್ಲಿ ಶಿವಣ್ಣನನ್ನು ಬಿಗ್ ಸ್ಕ್ರೀನ್ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
WATCH TEASER

