ಬಳ್ಳಾರಿ : ಬಳ್ಳಾರಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಇಬ್ಬರು ಗನ್ ಮ್ಯಾನ್ ಗಳನ್ನು ಬಂಧಿಸಿದ್ದಾರೆ.
ಶಾಸಕ ಜನಾರ್ಧನ ರೆಡ್ಡಿ ಮನೆ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾಗಿದ್ದರು. ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಖಾಸಗಿ ಗನ್ ಮ್ಯಾನ್ ಗಳಾದ ಬಲ್ಜೀತ್ ಸಿಂಗ್ ಹಾಗೂ ಬಲ್ಜಿನಂದರ್ ಸಿಂಗ್ ಎಂಬುವವರನ್ನು ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.
ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ-ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಜನರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣದಲ್ಲಿ ಬಳ್ಳಾರಿ ಪೊಲೀಸರು ಮೂವರು ಖಾಸಗಿ ಗನ್ ಮ್ಯಾನ್ ಗಳು, 10 ಜನ ಕಾಂಗ್ರೆಸ್ ಕಾರ್ಯಕರ್ತರು,10 ಜನ ಬಿಜೆಪಿ ಕಾರ್ಯಕರ್ತರು ಸೇರಿ ಒಟ್ಟು 26 ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಬಳ್ಳಾರಿ ನಗರದ ಸಿರುಗುಪ್ಪ ರಸ್ತೆಯ ಶಾಸಕ ಜನಾರ್ಧನ ರೆಡ್ಡಿ ಅವರ ಮನೆಯ ಮುಂದೆ ಜ.01 ರಂದು ಬ್ಯಾನರ್ ಹರಿದ ವಿಚಾರವಾಗಿ ಭಾರಿ ಗಲಾಟೆ ನಡೆದಿತ್ತು. ಈ ವೇಳೆ ಫೈರಿಂಗ್ ಮಾಡಿದ ಪರಿಣಾಮ ಓರ್ವ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಬಲಿಯಾಗಿದ್ದರು.

