HomeKarnatakaಬಳ್ಳಾರಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಸರ್ಕಾರಿ ಜಮೀನು ಅತಿಕ್ರಮಣ ತೆರವು

ಬಳ್ಳಾರಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಸರ್ಕಾರಿ ಜಮೀನು ಅತಿಕ್ರಮಣ ತೆರವು

ಬಳ್ಳಾರಿ: ಬಳ್ಳಾರಿ ಕೌಲ್ ಬಜಾರ್ ವ್ಯಾಪ್ತಿಯಲ್ಲಿ ಕೋಟ್ಯಂತರ ಮೌಲ್ಯದ ಸರ್ಕಾರಿ ಜಮೀನು ಅತಿಕ್ರಮಣ ತೆರವುಗೊಳಿಸಿದ್ದು, ಜಿಲ್ಲಾಡಳಿತ ಜಮೀನು ವಶಕ್ಕೆ ಪಡೆದಿದೆ.

ನಗರದ ಕೌಲ್ ಬಜಾರ್ ಸಮೀಪದ ‘ನಲ್ಲಚೆರುವು’ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಂದಾಯ ಹಾಗೂ ನಗರ ಪಾಲಿಕೆ ಅಧಿಕಾರಿಗಳು ಶುಕ್ರವಾರ ಪೊಲೀಸ್ ಬಂದೋಬಸ್ತ್ ನಲ್ಲಿ ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ.

ಕೌಲ್ ಬಜಾರ್ ವಾರ್ಡ್ ನಂ. 16, ಟಿ.ಎಸ್. ನಂ. 21/1ಎ1 ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೃಷಿ ಚಟುವಟಿಕೆಗಳನ್ನು ಕೈಗೊಂಡು, ಕೆರೆಯ ಕೊಳಚೆ ನೀರನ್ನು ಮೋಟಾರ್ ಪಂಪ್‌ ಸೆಟ್ ಮೂಲಕ ಹರಿಸಿ ಅತಿಕ್ರಮಣ ಮಾಡಿಕೊಳ್ಳಲಾಗಿತ್ತು. ಈ ಕುರಿತು ಸಾರ್ವಜನಿಕರು ಮತ್ತು ಸ್ಥಳೀಯರಿಂದ ಬಂದ ದೂರುಗಳ ಮೇರೆಗೆ ಎಚ್ಚೆತ್ತ ತಾಲೂಕು ಆಡಳಿತ ಮತ್ತು ಸಂಬಂಧಪಟ್ಟ ಇಲಾಖಾಧಿಕಾರಿಗಳು, ಜೆಸಿಬಿ ಯಂತ್ರಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆರವುಗೊಳಿಸಿದ ಜಾಗದಲ್ಲಿ ‘ಇದು ಕರ್ನಾಟಕ ಸರ್ಕಾರದ ಸ್ವತ್ತು, ಇದನ್ನು ಅತಿಕ್ರಮಣ ಮಾಡುವುದು ಶಿಕ್ಷಾರ್ಹ ಅಪರಾಧ’ ಎಂಬ ಎಚ್ಚರಿಕೆ ನಾಮಫಲಕವನ್ನು ಅಳವಡಿಸಲಾಯಿತು. ಅಕ್ರಮವಾಗಿ ಅಳವಡಿಸಲಾಗಿದ್ದ ನೀರಾವರಿ ಪೈಪ್‌ ಗಳು ಹಾಗೂ ಮೋಟಾರ್‌ ಗಳನ್ನು ತೆರವುಗೊಳಿಸಿ, ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆಯಲಾಯಿತು.

ಅದೇ ರೀತಿಯಾಗಿ ಸ್ಥಳೀಯ ಕನಕ ದುರ್ಗಮ್ಮ ಗುಡಿಯಿಂದ-ವಾಲ್ಮೀಕಿ ವೃತ್ತಕ್ಕೆ ತೆರಳುವ ಮುಖ್ಯರಸ್ತೆಯ ಪಕ್ಕದಲ್ಲಿದ್ದ್ದ ನಿವೇಶನ ಜಾಗದ ಒತ್ತುವರಿ ತೆರವು ಮಾಡಿದರು. ನಗರದ ವ್ಯಾಪ್ತಿಯಲ್ಲೇ ಬರುವ ಈ ಎರಡೂ ಜಾಗಗಳು ಕೋಟ್ಯಂತರ ರೂ. ಮೌಲ್ಯದ್ದಾಗಿವೆ.

ಈ ಸಂದರ್ಭದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು, ‘ಸರ್ಕಾರಿ ಜಮೀನು, ಕೆರೆ-ಕಟ್ಟೆ ಒತ್ತುವರಿ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಸಾರ್ವಜನಿಕ ಸ್ವತ್ತು ಅತಿಕ್ರಮಣಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ, ಡಿಡಿಎಲ್‌ಆರ್ ಪ್ರಮೋದ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಸರ್ವೇಯರ್‌ಗಳು, ಸ್ಥಳೀಯ ಪೋಲಿಸ್ ಠಾಣೆಯ ಸಿಬ್ಬಂದಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಹಾಜರಿದ್ದರು.

3 ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ

ಬಳ್ಳಾರಿ: ಪ್ರಸಕ್ತ ವರ್ಷದ ಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಳ್ಳಾರಿ ಜಿಲ್ಲೆಯ ಕಂಪ್ಲಿ ಹಾಗೂ ಕುಡುತಿನಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಸೂಕ್ಷ್ಮ ಗ್ರಾಮಗಳಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ.

ಕಂಪ್ಲಿ ಪೊಲೀಸ್ ಠಾಣಾ ಸರಹದ್ದಿಗೆ ಒಳಪಡುವ ನಂ.15 ಗೋನಾಳ, ನಂ.10 ಮುದ್ದಾಪುರ ಹಾಗೂ ಕುಡುತಿನಿ ಠಾಣಾ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಈ ಮೂರು ಗ್ರಾಮಗಳಲ್ಲಿ ಪ್ರಕ್ಷುಬ್ಧ ವಾತಾವರಣವಿದ್ದು, ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದರೆ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ ಎಂಬುದಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಹಾಗೂ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ನಿರ್ಬಂಧ ಹೇರುವಂತೆ ಪೊಲೀಸ್ ಇಲಾಖೆ ಕೋರಿರುವ ಕಾರಣ, ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಮೇಲ್ಕಂಡ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಆದೇಶಿಸಿದ್ದು, ನಿಷೇಧಿತ ಪ್ರದೇಶ ವ್ಯಾಪ್ತಿಯಲ್ಲಿ, ಹಬ್ಬದ ನೆಪದಲ್ಲಿ ಯಾವುದೇ ರೀತಿಯ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯವಾಗಿ ಜನಸಂದಣಿ ಸೇರುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular