ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಬೆಳಿಗ್ಗೆಯಿಂದ ಮೋಡಕವಿದ ವಾತಾವರಣ, ಅಲ್ಲಲ್ಲಿ ಮಳೆಯಾಗುತ್ತಿತ್ತು. ಸಂಜೆಯಾಗುತ್ತಿದ್ದಂತೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ. ವಾಹನ ಸವಾರರು ಮಳೆಯಲ್ಲಿ ಸಿಲುಕಿ ಪರದಾಡುವಂತಾಗಿದೆ.
ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರ್ದಂತೆ ಕೆಲ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.