ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಇದರ ಭಾಗವಾಗಿ ಪಶ್ಚಿಮ, ಉತ್ತರ ಮತ್ತು ಈಶಾನ್ಯ ವಿಭಾಗಗಳಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರದ ವಿವಿಧೆಡೆ 1,352 ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಹಲವು ರೌಡಿಶೀಟರ್‌ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ನಗರದಲ್ಲಿ ರೌಡಿಗಳ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸರು ಈ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ರೌಡಿಶೀಟರ್‌ಗಳ ಚಲನವಲನ, ಅವರ ಸಂಪರ್ಕಗಳು ಹಾಗೂ ಅಪರಾಧ ಚಟುವಟಿಕೆಗಳ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ
ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರೌಡಿಶೀಟರ್‌ಗಳ ಮೇಲೆ ನಿರಂತರ ನಿಗಾ ಇರಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ರೌಡಿಶೀಟರ್‌ಗಳ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪಶ್ಚಿಮ, ಉತ್ತರ ಹಾಗೂ ಈಶಾನ್ಯ ವಿಭಾಗಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹಲವು ರೌಡಿಶೀಟರ್‌ಗಳನ್ನು ವಶಕ್ಕೆ ಪಡೆದು ಅವರ ಹಿನ್ನೆಲೆ ಹಾಗೂ ಇತ್ತೀಚಿನ ಚಟುವಟಿಕೆಗಳ ಬಗ್ಗೆ ವಿಚಾರಣೆ ನಡೆಸಲಾಗಿದೆ.ನಗರದಲ್ಲಿ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ.

