ಬೆಂಗಳೂರು: ನಗರದಲ್ಲಿ ಭಾರೀ ಪ್ರಮಾಣದ ನಗದು ಪತ್ತೆಯಾಗಿದ್ದು, ಪೊಲೀಸರು ಬರೋಬ್ಬರಿ ₹9 ಕೋಟಿ ಹಣವನ್ನು ಜಪ್ತಿ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಕಾರನ್ನು ಅಡ್ಡಗಟ್ಟಿ ಪರಿಶೀಲಿಸಿದ ವೇಳೆ ನೋಟುಗಳ ಕಂತೆ ಪತ್ತೆಯಾಗಿದೆ.
ಮಾಹಿತಿಯ ಪ್ರಕಾರ, ಕಾರಿನಲ್ಲಿ ಭಾರೀ ಪ್ರಮಾಣದ ಹಣ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆದಾಯ ತೆರಿಗೆ (ಐಟಿ) ಅಧಿಕಾರಿಗಳಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರ ತಂಡ ಕಾರನ್ನು ತಡೆದು ಪರಿಶೀಲನೆ ನಡೆಸಿದೆ.
ಪರಿಶೀಲನೆ ವೇಳೆ ಕಾರಿನಲ್ಲಿ ಸುಮಾರು ₹9 ಕೋಟಿ ನಗದು ಪತ್ತೆಯಾಗಿದ್ದು, ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಣ ತಮಿಳುನಾಡಿನ ತೂತುಕುಡಿಗೆ ಸೇರಿದ ವ್ಯಕ್ತಿಯದ್ದು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಐಟಿ ಅಧಿಕಾರಿಗಳು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಹಣದ ಮೂಲ ಹಾಗೂ ಯಾವ ಉದ್ದೇಶಕ್ಕಾಗಿ ಸಾಗಿಸಲಾಗುತ್ತಿತ್ತು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಹಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರ ವಿವರಗಳ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

