ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಮಾದಕ ವಸ್ತುಗಳ ಅಕ್ರಮ ಸಾಗಾಟ, ಡ್ರಗ್ಸ್ ದಂಧೆಯಂತಹ ಪ್ರಕರಣಗಳು ಹೆಚ್ಚುತ್ತಿದ್ದು, ವಿದೇಶಿ ಪ್ರಜೆಗಳೇ ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ಕಾರ್ಯೋನ್ಮುಖರಾಗಿದ್ದು, ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ಕೊಡುವ ಮುನ್ನ ಮನೆ ಮಾಲೀಕರು ಕೆಲ ಎಚ್ಚರಿಕೆಯನ್ನು ವಹಿಸಿವಂತೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಡ್ರಗ್ಸ್, ಮಾದಕ ವಸ್ತುಗಳ ಅಕ್ರಮ ಸಾಗಾಟ, ಮಾರಾಟ ಪ್ರಕರಣದಲ್ಲಿ ವಿದೇಶಿ ಪ್ರಜೆಗಳ ಕೈವಾಡ ಹೆಚ್ಚಿರುವ ಹಿನ್ನೆಲೆಯಲ್ಲಿ ಮನೆ ಮಾಲೀಕರು ವಿದೇಶಿ ಪ್ರಜೆಗಳಿಗೆ ಮನೆಗಳನ್ನು ಬಾಡಿಗೆ ಕೊಡುವ ಮುನ್ನ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಫಾರ್ಮ್-16 ಸಲ್ಲಿಸುವುದು ಕಡ್ಡಾಯ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಮನೆ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಈಶಾನ್ಯ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭದಲ್ಲಿ ಫಾರ್ಮ್–16 ಸಲ್ಲಿಸುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಪಾಲಿಸದೆ ಬಾಡಿಗೆ ನೀಡಿದಲ್ಲಿ, ಮನೆ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಇದರಿಂದ ಬಾಡಿಗೆ ಮನೆಗಳಲ್ಲಿ ಯಾರು ವಾಸಿಸುತ್ತಿದ್ದಾರೆಂಬ ಮಾಹಿತಿ ಪೊಲೀಸರ ಕೈ ಸಿಗುವುದರಿಂದ ಅಕ್ರಮ ಚಟುವಟಿಕೆಗಳು ನಡೆಯದಂತೆ ನಿಗಾವಹಿಸಬಹುದುಗಾದಿದೆ.
ಇತ್ತೀಚಿನ ದಿನಗಳಲ್ಲಿ ವೀಸಾ ಅವಧಿ ಮುಗಿದರೂ ತಮ್ಮ ದೇಶಗಳಿಗೆ ಮರಳದೇ ನಗರದಲ್ಲಿ ತಂಗುತ್ತಿರುವ ವಿದೇಶಿ ಪ್ರಜೆಗಲು ಪತ್ತೆಯಾಗಿದ್ದು. ಕೆಲವರು ವಿದ್ಯಾರ್ಥಿ ವೀಸಾದ ಮೇಲೆ ಬಂದು ಡ್ರಗ್ಸ್ ದಂಧೆ, ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಡ್ರಗ್ ಪೆಡ್ಲಿಂಗ್ ಕೇಸ್ ನಲ್ಲಿ ವಿದೇಶಿ ಪ್ರಜೆಗಳ ಸಂಖ್ಯೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಮನೆ ಮಾಲೀಕರಿಗೆ ಬಾಡಿಗೆ ಕೊಡುವ ಮುನ್ನ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.

